ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯ ಜೋಡ್ ಘಾಟಿ ಎಂಬಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇತರ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು, ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದೆ. ಹಲವು ಆಸ್ತಿಪಾಸ್ತಿಗೆ ಹಾನಿಯಾಗಿದೆ. ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ರಾಜ್‌ಬಾಗ್ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದೆ.
ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ಮೇಘಸ್ಫೋಟ: ಮೃತರ ಸಂಖ್ಯೆ 60ಕ್ಕೆ ಏರಿಕೆ, ನೂರಾರು ಮಂದಿ ನಾಪತ್ತೆ
ಪೊಲೀಸ್ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಜಂಟಿ ತಂಡವು ಸ್ಥಳೀಯ ಸ್ವಯಂಸೇವಕರ ಸಹಾಯದಿಂದ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಈವರೆಗೆ ನಾಲ್ವರ ಶವ ಪತ್ತೆಯಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಥುವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಗಾರ್ಡ್, ಚಾಂಗ್ಡಾ ಗ್ರಾಮಗಳಲ್ಲಿ ಹಾಗೂ ಲಖನ್‌ಪುರದ ದಿಲ್ವಾನ್-ಹುಟ್ಲಿ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ಆದರೆ ಹೆಚ್ಚಿನ ಹಾನಿ ಉಂಟಾಗಿಲ್ಲ ಎಂದು ವರದಿಯಾಗಿದೆ.
ಇನ್ನು ಜಮ್ಮು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಸಂಭವಿಸಿದ ಬೃಹತ್ ಮೇಘಸ್ಫೋಟದಲ್ಲಿ ಮೃತರ ಸಂಖ್ಯೆಯು 60ಕ್ಕೆ ಏರಿಕೆಯಾಗಿದೆ. ಇನ್ನೂ ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
