“ನನ್ನ ಜೀವನದ 35-40 ವರ್ಷಗಳ ಕಾಲ ನಿರಂತರ ಸಮಾಜ ಸೇವೆಯನ್ನು ಗುರುತಿಸಿ ಜಿಲ್ಲಾಡಳಿತ 79 ನೇ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ದಿನ ನನಗೆ ಅಭಿನಂದನೆ ಸಲ್ಲಿಸಿ ಗೌರವಿಸಿದ ಜಿಲ್ಲಾಡಳಿತಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡ ಹಿಂದುಳಿದ ವರ್ಗ,ಅಲ್ಪಸಂಖ್ಯಾತ ಕಲ್ಯಾಣ ಸಮಿತಿಯ ರಾಜಾಧ್ಯಕ್ಷರು ಉಡಚಪ್ಪ ಮಾಳಗಿ ಹೇಳಿದರು.
ಹಾವೇರಿ ಪಟ್ಟಣದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ, ಜಿಲ್ಲಾಡಳಿತಕ್ಕೆ ಧನ್ಯವಾದ ಸಲ್ಲಿಸಿ ಮಾತನಾಡಿದರು.
“ವಿದ್ಯಾರ್ಥಿ ದೆಸೆಯಿಂದಲೂ ಸಾಮಾಜಿಕ ಕಳಕಳಿಯ ಹೋರಾಟ ಮಾಡುತ್ತಾ ಬರುತ್ತಿದ್ದೇನೆ.ಕರಾಟೆ ಅಸೋಸಿಯೇಷನ್ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಕರಾಟೆ ತರಬೇತಿ ನೀಡಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯರಾಗಿ ಆರು ವರ್ಷಗಳ ಕಾಲ ಜನತೆಯ ಸೇವೆ ಸಲ್ಲಿಸಿರುತ್ತೇನೆ. ಹಾವೇರಿ ಶಹರ ಪೋಲಿಸ್ ಠಾಣೆ ನಾಗರಿಕ ಸಮಿತಿಯ ಸದಸ್ಯರಾಗಿ ಕೆಲಸ ಮಾಡಿದ್ದೇನೆ.ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವೆ” ಎಂದರು.
“ಡಿಎಸ್ಎಸ್ ರಾಜ್ಯ ಸಮಿತಿ ಸದಸ್ಯರಾಗಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಮಿತಿ ಸದಸ್ಯರಾಗಿ,ಅಹಿಂದ ಜಿಲ್ಲಾಧ್ಯಕ್ಷರಾಗಿ ಕೆಲಸ ಮಾಡುತ್ತಿರುವೆ. ಮಾದಿಗರ ಒಳಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾಗಿ ಧ್ವನಿ ಇಲ್ಲದವರ ಧ್ವನಿಯಾಗಿ ಎಲ್ಲಾ ವರ್ಗದ ಹಾಗೂ ಸಮಾಜದ ಜನರ ಜೊತೆಗೆ ಉತ್ತಮ ಬಾಂಧವ್ಯ ಹೊಂದಿಕೊಂಡು ಜನರ ಸೇವೆಯನ್ನು ಮುಂದುವರಿಸಿರುತ್ತೇನೆ” ಎಂದರು.
“ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನನ್ನ ಕೈಲಾದಷ್ಟು ಸಹಾಯ ಸಹಕಾರ ಮಾಡುತ್ತಾ ಬರುತ್ತಿರುವುದನ್ನು ಗಮನಿಸಿ ಹಾವೇರಿ ಜಿಲ್ಲಾಡಳಿತ ಸಮಾಜ ಸೇವೆಯನ್ನು ಗುರುತಿಸಿ ಅಭಿನಂದನಾ ಪ್ರಮಾಣ ಪತ್ರ ನೀಡಿ ಗೌರವಿಸಿ ಸನ್ಮಾನಿಸರುವುದು ಹೆಮ್ಮೆಯ ವಿಷಯವಾಗಿದೆ. ನನ್ನ ಈ ಸಮಾಜ ಸೇವೆ ಗುರುತಿಸಿದ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೆ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಬಿ ದಾನಮ್ಮನವರ ಅವರಿಗೆ ,ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ ಅವರಿಗೆ ಕೃತಜ್ಞತೆ ಸಲ್ಲಿಸುವೆ” ಎಂದು ಹೇಳಿದರು.
ಈ ಸಮಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ-ಅಧಿಕಾರಿಗಳಿಗೆ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರು ಸೇರಿದಂತೆ ಅನೇಕರಿದ್ದರು.