ರಾಜ್ಯದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಇಂದು ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನಲ್ಲಿಯೂ ಮಳೆ ಮುಂದುವರೆದಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಕೊಡಗು, ಹಾಸನ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಯ ಕೆಲವು ತಾಲ್ಲೂಕುಗಳಲ್ಲಿ ರಜೆ ನೀಡಲಾಗಿದೆ. ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಪ್ರೌಢಶಾಲೆವರೆಗೆ, ಶಿವಮೊಗ್ಗ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನು ಓದಿದ್ದೀರಾ? ಮಂಗಳೂರು | ಭಾರೀ ಮಳೆ ಮುನ್ಸೂಚನೆ; ಆರೆಂಜ್ ಅಲರ್ಟ್
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಮೂಡಿಗೆರೆ, ಎನ್‌ಆರ್ ಪುರ, ಕಳಸ ತಾಲ್ಲೂಕುಗಳಲ್ಲಿ ಮತ್ತು ಚಿಕ್ಕಮಗಳೂರು ತಾಲ್ಲೂಕಿನ ಜಾಗರ, ಆಲ್ದೂರು ಹೋಬಳಿ, ಆವತಿ, ಖಾಂಡ್ಯದಲ್ಲಿ ಮಳೆ ಹಿನ್ನೆಲೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಂಗನಾವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನಿರಂತರವಾಗಿ ಮಳೆಯಾಗುತ್ತಿದ್ದು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗಿನಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಬೆನ್ನಲ್ಲೇ ಜಿಲ್ಲಾಧಿಕಾರಿ ವೆಂಕಟರಾಜಾ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಶಿವಮೊಗ್ಗದಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು ಹತ್ತು ತಾಲ್ಲೂಕುಗಳಿಗೆ ರಜೆ ಘೋಷಿಸಲಾಗಿದೆ. ಅಂಕೋಲಾ, ಹೊನ್ನಾವರ, ಶಿರಸಿ, ಯಲ್ಲಾಪುರ, ಜೋಯಿಡಾ, ಕಾರವಾರ, ಕುಮಟಾ, ಭಟ್ಕಳ, ಸಿದ್ಧಾಪುರದಲ್ಲಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹಾಸನದಲ್ಲಿ ಸಕಲೇಶಪುರ, ಬೇಳೂರು ತಾಲ್ಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಲಾಗಿದೆ. ಆಲೂರು ತಾಲ್ಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಲತಾ ಕುಮಾರಿ ಆದೇಶಿಸಿದ್ದಾರೆ.
