ಅರಸು ಜನ್ಮದಿನದಂದೇ ಅಧಿವೇಶನದಲ್ಲಿ ಒಳಮೀಸಲಾತಿ ಘೋಷಿಸಿದ ಸಿದ್ದರಾಮಯ್ಯ

Date:

Advertisements
  • ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗ ರಚಿಸಲು ತೀರ್ಮಾನ
  • ಒಳಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆ ರದ್ದು
  • ಮಾರ್ಪಾಡುಗಳ ಅಗತ್ಯತೆ ಕಂಡುಬಂದರೆ ಬದಲಾವಣೆ ಷರತ್ತಿಗೆ ಬದ್ಧ

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಕುರಿತು ಸರ್ಕಾರದ ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವರಾಜ ಅರಸು 110ನೇ ಜನ್ಮದಿನವಾದ ಬುಧವಾರ (ಆ.20) ನಡೆದ ವಿಧಾನಸಭೆ ಅಧಿವೇಶನದಲ್ಲಿ ಘೋಷಿಸಿದರು.

ಸದನವನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, “19-8-2025 ರಂದು ನಡೆದ ಸಚಿವ ಸಂಪುಟದಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಅವರ ಶಿಫಾರಸ್ಸುಗಳನ್ನು ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದ್ದೇವೆ. ದಾಸ್ ಆಯೋಗವು ರಾಜ್ಯದ 101 ಪರಿಶಿಷ್ಟ ಜಾತಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ 01.08.2025 ರಂದು ವರದಿಯನ್ನು ಸಲ್ಲಿಸಿತು. ಆಯೋಗವು ಪರಿಶಿಷ್ಟ ಜಾತಿಗಳಿಗೆ ಸೇರಿದ 1,05,09,871 ಜನರ ದತ್ತಾಂಶಗಳನ್ನು ಸಂಗ್ರಹಿಸಿದೆ. ಶೇ.93 ರಷ್ಟು ಪರಿಶಿಷ್ಟ ಜಾತಿಗಳ ಜನಸಂಖ್ಯೆಯು ಈ ಸಮೀಕ್ಷೆಗೆ ಲಭ್ಯವಾಗಿದೆ. ಸಚಿವ ಸಂಪುಟವು ಈ ವರದಿಯನ್ನು ಕೂಲಂಕಶವಾಗಿ ಪರಿಶೀಲಿಸಿದೆ” ಎಂದರು.

“ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬಂಧಿತ ಜಾತಿಗಳುಳ್ಳ ಎ ಪ್ರವರ್ಗಕ್ಕೆ – ಶೇ. 6, ಬಲಗೈ ಸಂಬಂಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ – ಶೇ. 6 ಹಾಗೂ ಸಿ ಪ್ರವರ್ಗಕ್ಕೆ – ಶೇ.5 ರಷ್ಟು ಒಳಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದರು.

Advertisements

“ಪರಿಶಿಷ್ಟ ಜಾತಿಗಳಲ್ಲಿರುವ ಎಲ್ಲ 101 ಜಾತಿಗಳಿಗೆ ಶಿಕ್ಷಣ, ಉದ್ಯೋಗಾವಕಾಶ ಹಾಗೂ ಇನ್ನಿತರೆ ವಿಷಯಗಳಲ್ಲಿ ಅವಕಾಶಗಳನ್ನು ಒದಗಿಸುವಲ್ಲಿ ಸಮಾನತೆ ಮತ್ತು ನ್ಯಾಯ ಸಮ್ಮತತೆಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಈ ಮಾರ್ಪಾಡುಗಳನ್ನು ಮಾಡಲಾಗಿದೆ. ಈ ರೀತಿ ನಿರ್ಧಾರ ಮಾಡುವಾಗ ಸಚಿವ ಸಂಪುಟವು ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿ ನಮೂದಿಸಲಾದ ತತ್ವಗಳನ್ನು ಗಮನದಲ್ಲಿಟ್ಟುಕೊಂಡಿದೆ” ಎಂದರು.

“ಎಡಗೈ ಸಂಬಂಧಿತ ಜಾತಿಗಳೆಂದು ಆಯೋಗವು ಗುರ್ತಿಸಿರುವ ಸಮುದಾಯಗಳಿಗೆ ಶೇ.6 ರಷ್ಟು ಒಳಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ. ದಾಸ್ ಆಯೋಗವು ಪರಯ, ಮೊಗೇರ ಮುಂತಾದ ಬಲಗೈ ಸಂಬಂಧಿತ ಜಾತಿಗಳನ್ನು ಎಡಗೈ ಸಂಬಂಧಿತ ಜಾತಿಗಳ ಜೊತೆ ಸೇರಿಸಲಾಗಿದೆ ಎಂಬುದನ್ನು ಗಮನಿಸಿದ ಸಚಿವ ಸಂಪುಟವು ಈ ಜಾತಿಗಳನ್ನು ಬಲಗೈ ಸಂಬಂಧಿತ ಜಾತಿಗಳ ಜೊತೆ ಸೇರಿಸಿ ಬಲಗೈ ಸಂಬಂಧಿತ ಜಾತಿಗಳ ಸಮೂಹಕ್ಕೆ ಶೇ.6 ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ” ಎಂದು ಹೇಳಿದರು.

“ಹಾಗೆಯೇ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಗುಂಪುಗಳಲ್ಲಿನ 4,74,954 ಜನಸಂಖ್ಯೆಯನ್ನು ಎಡಗೈ ಸಂಬಂಧಿತ ಮತ್ತು ಬಲಗೈ ಸಂಬಂಧಿತ ಜಾತಿಗಳ ಜೊತೆ ಸಮಾನವಾಗಿ ಹಂಚಿಕೆ ಮಾಡಲು ತೀರ್ಮಾನಿಸಿದ್ದೇವೆ. ​ಸ್ಪೃಶ್ಯ ಜಾತಿಗಳ ಗುಂಪಿಗೆ ದಾಸ್ ಅವರು ಶೇ. 4 ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಹಾಗೆಯೇ 59 ಜಾತಿಗಳ 5,22,099 ಜನಸಂಖ್ಯೆಯನ್ನು ಪ್ರವರ್ಗ-ಎ ಎಂದು ತೀರ್ಮಾನಿಸಿ ಶೇ.1 ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಕೆಲವು ತಾಂತ್ರಿಕ ಕಾರಣಗಳಿಂದ ಈ ಎರಡೂ ಗುಂಪುಗಳನ್ನು ಒಟ್ಟಿಗೆ ಸೇರಿಸಿ ಶೇ.5 ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ” ಎಂದು ವಿವರಿಸಿದರು.

“​ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲು ತೀರ್ಮಾನಿಸಿದ್ದೇವೆ. ​ಒಳ ಮೀಸಲಾತಿಯ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನಿಸಿದ್ದೇವೆ.​ ಇದೇ ಸಂದರ್ಭದಲ್ಲಿ ಒಳಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ” ಎಂದು ಹೇಳಿದರು.

“​ಸರ್ಕಾರವು ಈಗ ಕೈಗೊಂಡಿರುವ ತೀರ್ಮಾನದಲ್ಲಿ ಯಾವುದಾದರೂ ಮಾರ್ಪಾಡುಗಳ ಅಗತ್ಯತೆ ಕಂಡುಬಂದರೆ ಅವುಗಳನ್ನು ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿನ ಅಂಕಿ-ಅಂಶಗಳನ್ನು ಆಧರಿಸಿ ಬದಲಾವಣೆಗೆ ಒಳಪಡಿಸುವ ಷರತ್ತಿಗೆ ಬದ್ಧವಾಗಿದೆ. ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರ ವರದಿಯನ್ನು ಮೇಲೆ ಪ್ರಸ್ತಾಪಿಸಿದ ಮಾರ್ಪಾಟುಗಳೊಂದಿಗೆ ಅಂಗೀಕರಿಸಿದೆ ಎಂಬ ಅಂಶಗಳನ್ನು ಸದನದ ಮುಂದೆ ಮಂಡಿಸಲು ಸರ್ಕಾರವು ಸಂತೋಷ ಪಡುತ್ತದೆ. ನಮ್ಮ ಈ ತೀರ್ಮಾನವು ಒಳ ಮೀಸಲಾತಿ ಕುರಿತ ದಶಕಗಳ ಹೋರಾಟಕ್ಕೆ ನ್ಯಾಯ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಭಾವಿಸಿದ್ದೇವೆ. ಅಭಿವೃದ್ಧಿಶೀಲ ರಾಜ್ಯವಾದ ಕರ್ನಾಟಕವು ಸಾಮಾಜಿಕ ನ್ಯಾಯದ ವಿಚಾರದಲ್ಲೂ ಮುಂಚೂಣಿಯಲ್ಲಿದೆ ಎಂಬುದನ್ನು ನಮ್ಮ ಸರ್ಕಾರವು ಸಾಬೀತು ಮಾಡಿದೆ” ಎಂದು ತಿಳಿಸಿದರು.

” ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು 01.08.2024 ರಂದು ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ ಒಳಮೀಸಲಾತಿ ತೀರ್ಪು ನೀಡಿದೆ. ಅಂದರೆ, ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಸಾಂವಿಧಾನಿಕವಾಗಿ ದತ್ತವಾಗಿದೆ ಎಂದು ಸ್ಪಷ್ಟವಾಗಿ ಹೇಳಿದೆ. ಸಂವಿಧಾನದ ಅನುಚ್ಚೇದ 14, 15 ಮತ್ತು 16 ರಲ್ಲಿ ತಿಳಿಯಪಡಿಸಿರುವ ಸಮಾನತೆಯ ತತ್ವಕ್ಕೆ ಯಾವುದೇ ಚ್ಯುತಿ ಬಾರದಂತೆ ಅದರ ಮೂಲ ಆಶಯವನ್ನು ಸದೃಢಗೊಳಿಸುವ ದೃಷ್ಟಿಯಿಂದ ಒಳ ಮೀಸಲಾತಿ ವ್ಯವಸ್ಥೆ ಕಲ್ಪಿಸಬಹುದು ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ, ನಮ್ಮ ಸರ್ಕಾರವು ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್‌ದಾಸ್ ಅವರ ಏಕ ಸದಸ್ಯ ಆಯೋಗವನ್ನು ರಚಿಸಿ, ಸದರಿ ಆಯೋಗವು ಸೂಕ್ತ ದತ್ತಾಂಶಗಳನ್ನು (Empirical Data) ಸಂಗ್ರಹಿಸಿ, ಒಳ ಮೀಸಲಾತಿ ನೀಡುವ ಕುರಿತು ಶಿಫಾರಸ್ಸುಗಳನ್ನು ಮಾಡಲು ಕೋರಲಾಯಿತು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಲಿಂಗಾಯತ ಮಠಾಧೀಶರ ಒಕ್ಕೂಟದಿಂದ ಬಸವ ಸಂಸ್ಕೃತಿ ಅಭಿಯಾನ, ಸೆ.1ರಿಂದ ಆರಂಭ

ಲಿಂಗಾಯತ ಮಠಾಧೀಶರ ಒಕ್ಕೂಟವು ಸೆ.1ರಿಂದ ಅ.1ರವರೆಗೆ ರಾಜ್ಯದಲ್ಲಿ ನಡೆಸಲಿರುವ ಬಸವ ಸಂಸ್ಕೃತಿ...

ಧರ್ಮಸ್ಥಳ | ಅನನ್ಯಾ ಭಟ್ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

ಧರ್ಮಸ್ಥಳ ಗ್ರಾಮದಲ್ಲಿ ಅಕ್ರಮವಾಗಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಆರೋಪ ಪ್ರಕರಣ...

ಚಿಕ್ಕಮಗಳೂರು l ಎಸ್ಐಟಿ ತನಿಖೆ: ಬಿಜೆಪಿ, ಕಾಂಗ್ರೆಸ್ ಶಾಸಕರ ಶಾಸಕತ್ವ ರದ್ದುಗೊಳಿಸಬೇಕು; ದಸಂಸ ಆಗ್ರಹ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್ ಐಟಿ ತನಿಖೆಯನ್ನು ದಿಕ್ಕು ತಪ್ಪಿಸಲು ಹೊರಟಿರುವ ಬಿಜೆಪಿ...

Download Eedina App Android / iOS

X