ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ ಕಾರ್ಯಕರ್ತ, ಸೌಜನ್ಯ ಪರ ಹೋರಾಟಗಾರರಾಗಿರುವ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಉಜಿರೆಯಲ್ಲಿ ಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತರುತ್ತಿದ್ದಾಗ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ 500 ಮೀಟರ್ ಸುತ್ತಲಿನ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾದಿಕಾರಿಯವರು ಆದೇಶಿಸಿದ್ದಾರೆ.
ಉಡುಪಿ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ಅತಿ ಅವಶ್ಯಕವಾಗಿರುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡದಂತೆ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023ರ ಕಲಂ 163ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿಆಗಸ್ಟ್ 21ರ ಮಧ್ಯಾಹ್ನ 1ರಿಂದ 22ರ ಮಧ್ಯಾಹ್ನ 1ರವರೆಗೆ ಬ್ರಹ್ಮಾವರ ಪೊಲೀಸ್ ಠಾಣೆ ಸರಹದ್ದಿನ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ.
- ನಿಷೇದಾಜ್ಞೆ ಹೊರಡಿಸಿರುವ ಪ್ರದೇಶದಲ್ಲಿ ಸಾರ್ವಜನಿಕರು 5ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ.
- ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
- ಕಲ್ಲುಗಳು, ಕ್ಷೌರ ಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
- ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
- ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ/ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.
- ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.
- ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
- ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿ ಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುದಾಗಲಿ, ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
- ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.
- ಮೇಲ್ಕಂಡ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳನ್ನು ಕೈಗೊಳ್ಳುವಂತಿಲ್ಲ.
- ಸದರಿ ಆದೇಶವು ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. ಎಂಬ ಆದೇಶವನ್ನು ಆಗಸ್ಟ್ 21ರಂದು ಆದೇಶ ಹೊರಡಿಸಲಾಗಿದೆ.