ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧಿತರಾಗಿದ್ದ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಶನಿವಾರ ಬೆಳಗ್ಗೆ ನ್ಯಾಯಾಲಯಕ್ಕೆ ಬಂದಿದ್ದ ಬ್ರಹ್ಮಾವರ ಪೊಲೀಸರು ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಈ ವೇಳೆ ಪೊಲೀಸರನ್ನು ಪ್ರಶ್ನಿಸಿದ್ದ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ನಾಗೇಶ್ ಅವರು, “ಪ್ರಥಮ ವಿಚಾರಣೆಯ ವೇಳೆ ಕಸ್ಟಡಿಗೆ ಯಾಕೆ ಕೇಳಿರಲಿಲ್ಲ” ಎಂದು ಪ್ರಶ್ನಿಸಿದ್ದರು. ಅಲ್ಲದೇ, ಒಂದು ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಲು ಸೂಚಿಸಿದ್ದರು.
ಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಹಿರಿಯಡ್ಕ ಜೈಲಿನಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಕೋರ್ಟಿಗೆ ಮಧ್ಯಾಹ್ನ 1:30ರ ಸುಮಾರಿಗೆ ಕೋರ್ಟ್ ಗೆ ಹಾಜರುಪಡಿಸಿದ್ದರು. ಆ ಬಳಿಕ ಮಹೇಶ್ ಶೆಟ್ಟಿ ತಿಮರೋಡಿ 3 ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ ನ್ಯಾಯಾಲಯವು ನೀಡಿತ್ತಲ್ಲದೇ., 4.45ರ ಸುಮಾರಿಗೆ ಹಾಜರುಪಡಿಸಲು ತಿಳಿಸಿತ್ತು.
ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | 10 ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ಸಾಕ್ಷಿ ದೂರುದಾರ
4.45ರ ಸುಮಾರಿಗೆ ಮತ್ತೊಮ್ಮೆ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಕೋರ್ಟಿಗೆ ಪೊಲೀಸರು ಕರೆತಂದಿದ್ದಾರೆ. ಆ ಬಳಿಕ ತಿಮರೋಡಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ತಿಮರೋಡಿ ಪರವಾಗಿ ವಕೀಲರಾದ ವಿಜಯ ವಾಸು ಪೂಜಾರಿ ವಾದ ಮಂಡಿಸಿದ್ದರು.
