ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಸಂಬಂಧಿಸಿದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಅವುಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಆಯಾ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿ, ಪ್ರಗತಿಗೆ ಶ್ರಮಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಕೆ. ನಾಗಣ್ಣಗೌಡ ಹೇಳಿದರು.
ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಮಾತನಾಡಿದರ ಅವರು, ಮಕ್ಕಳ ಹಕ್ಕು ಮತ್ತು ಸ್ವಾತಂತ್ರ್ಯ ಕಾಪಾಡಲು ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ರಾಜ್ಯ ಹಾಗೂ ಜಿಲ್ಲಾಮಟ್ಟದಲ್ಲಿ ಆಯಾ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯ ಮತ್ತು ಸಂವಹನದ ಮೂಲಕ ಮಕ್ಕಳ ಹಕ್ಕುಗಳು ಮತ್ತು ಸ್ವಾತಂತ್ರ್ಯ ಕಾಪಾಡುವ ಮೂಲಕ ಅವರ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.
ಜಿಲ್ಲೆಯ ಯಾವ ತಾಲೂಕಿನಲ್ಲಿಯೂ ಮಕ್ಕಳು ಅಪೌಷ್ಟಿಕತೆಯಿಂದ ಬಳಲದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಸರ್ಕಾರವು ಅಂಗನವಾಡಿ ಮಕ್ಕಳಿಗೆ ಪೌಷ್ಟಿಕಾಂಶದ ಕೊರತೆಯನ್ನು ನೀಗಿಸಲು ಗುಣಮಟ್ಟದ ಆಹಾರವನ್ನು ಒದಗಿಸುತ್ತಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಲ್ಲಿ ಇಲಾಖೆಯ ಅಧಿಕಾರಿಗಳ ಪಾತ್ರ ಮುಖ್ಯವಾಗಿದೆ. ಶಾಲೆ ಬಿಟ್ಟ ಮಕ್ಕಳನ್ನು ಪಟ್ಟಿಮಾಡಿ ಅವರಿಗೆ ಆದ ತೊಂದರೆಯನ್ನು ತಿಳಿದು, ಮರಳಿ ಶಾಲೆಗೆ ಕರೆತರುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.
ಮಕ್ಕಳ ಸಹಾಯವಾಣಿ-1098 ಸಂಖ್ಯೆಗೆ ಸಂಕಷ್ಟದಲ್ಲಿರುವ ಯಾವುದೇ ಮಗು, ಕರೆ ಮಾಡಿದರೆ, ತಕ್ಷಣದ ಸಹಾಯ ಸಿಗುವಂತೆ ನೋಡಿಕೊಳ್ಳಬೇಕು. ಮಕ್ಕಳ ಸಹಾಯವಾಣಿ ಸಂಖ್ಯೆಯ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕಿದೆ ಮತ್ತು ಶಾಲೆಗಳಲ್ಲಿ ಕಡ್ಡಾಯವಾಗಿ ಇದನ್ನು ಮಕ್ಕಳಿಗೆ ತಿಳಿಸಬೇಕು ಹಾಗೂ ಸಹಾಯವಾಣಿ ಫಲಕಗಳನ್ನು ಕಚೇರಿಗಳಲ್ಲಿ, ಬಸ್ ನಿಲ್ದಾಣಗಳಲ್ಲಿ ಮತ್ತು ರೈಲು ನಿಲ್ದಾಣಗಳಲ್ಲಿ ಜನದಟ್ಟಣೆ ಇದ್ದ ಪ್ರದೇಶದಲ್ಲಿ ಜನರಿಗೆ ಕಾಣುವ ಹಾಗೆ ಪ್ರದರ್ಶಿಸಬೇಕು ಎಂದು ಸೂಚಿಸಿದರು.
ಇದನ್ನೂ ಓದಿರಿ ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ
ಸಭೆಯಲ್ಲಿ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಮಕ್ಕಳ ಸಹಾಯವಾಣಿಯ ನೂತನ ಲಾಂಛನ ಹಾಗೂ ಮಾಹಿತಿ ಫಲಕಗಳನ್ನು ಬಿಡುಗಡೆ ಮಾಡಿದರು. ವೇದಿಕೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಬಿ.ವಾಯ್.ಪಾಟೀಲ, ಉಪ ಪೊಲೀಸ್ ಆಯುಕ್ತ ಮಹಾನಿಂಗ ನಂದಗಾವಿ, ಜಿಲ್ಲಾ ಪಂಚಾಯತ ಸಹಾಯಕ ಕಾರ್ಯದರ್ಶಿ ಅಜಯ ಎನ್. ಇದ್ದರು.
https://shorturl.fm/AoHnF