ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸುವಂತೆ ಅಗ್ರಹಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮೈಸೂರಿನ ಹಳೆ ಡಿಸಿ ಕಚೇರಿ ಎದರು ಪ್ರತಿಭಟನೆ ನಡೆಸಿದರು.
ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷೆ ಸ್ವಾತಿ ಮಾತನಾಡಿ “ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ” ಎಂದರು.
ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ಹೇಮಾ ಮಾತನಾಡಿ “ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ, ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಈ ಕೂಡಲೇ ಪರಿಹರಿಸಬೇಕೆಂದು” ಆಗ್ರಹಿಸಿದರು.

ಮನವಿ ಪತ್ರವನ್ನು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರ ಮೂಲಕ ಮಾನ್ಯ ಮುಖ್ಯಮಂತ್ರಿ ಅವರಿಗೆ ಸಲ್ಲಿಸಲಾಯಿತು.
ಈ ಸುದ್ದಿ ಓದಿದ್ದೀರಾ? ಮೈಸೂರು | ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ; ಮೀಲಾದ್ ಘೋಷಣಾ ಜಾಥಾ
ಪ್ರತಿಭಟನೆಯಲ್ಲಿ ರೈತ ಸಂಘಟನೆಯ ಮುಖಂಡ ಬನ್ನೂರು ನಾರಾಯಣಸ್ವಾಮಿ, ರಾಜ್ಯ ಖಜಾಂಚಿಗಳಾದ ಸುಭಾಷ್ ಬೆಟ್ಟದಕೊಪ್ಪ, ಜಿಲ್ಲಾ ಅಧ್ಯಕ್ಷೆ ಚಂದ್ರಕಲಾ, ಜಿಲ್ಲಾ ಕಾರ್ಯದರ್ಶಿ ನಿತಿನ್, ಕಾರ್ಯದರ್ಶಿ ಮಂಡಳಿ ಸದಸ್ಯರಾದ ಚಂದ್ರಿಕಾ, ಅಭಿಷೇಕ್ ಡಿ. ಪಿ, ಅಂಜಲಿ, ದಿಶಾ, ನಂದೀಶ್ ಹಾಗೂ ವಿದ್ಯಾರ್ಥಿಗಳು ಇದ್ದರು.