ತುಮಕೂರು ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ ನೆರವೇರಿಸಿದರು.
ನಬಾರ್ಡ್ ಯೋಜನೆಯಡಿ 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ನೂತನ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿದ ಅವರು, ಕಟ್ಟಡ ನಿರ್ಮಾಣ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಈ ಹಾಸ್ಟೆಲ್ ನಿರ್ಮಾಣ ಕಾರ್ಯವನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಕಲ್ಪಿಸಬೇಕು ಎಂದು ಅವರು ಹೇಳಿದರು.
ವಿದ್ಯಾರ್ಥಿನಿಲಯಗಳು ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿರಬೇಕು. ಈ ನಿಟ್ಟಿನಲ್ಲಿ ನಿರ್ಮಾಣ ಹಂತದಲ್ಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ನೆಲ ಅಂತಸ್ತು, ಮೊದಲನೇ ಮಹಡಿ ಹಾಗೂ 2ನೇ ಮಹಡಿಯನ್ನು ಹೊಂದಿದ್ದು, ಸುಮಾರು 24 ಕೊಠಡಿಗಳು, ಗ್ರಂಥಾಲಯ, ಅಡುಗೆ ಕೋಣೆ, ಶೌಚಾಲಯಗಳು ಸೇರಿದಂತೆ ಸುಸಜ್ಜಿತವಾದ ವಿದ್ಯಾರ್ಥಿನಿಲಯ ನಿರ್ಮಾಣವಾಗಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸೋನಿಯಾ ವರ್ಣೇಕರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕೃಷ್ಣಪ್ಪ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆರ್. ರಂಗಸ್ವಾಮಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಿದ್ದರಾಜು, ಬಿಸಿಎಂ ಇಲಾಖೆಯ ವ್ಯವಸ್ಥಾಪಕ ರವಿಕುಮಾರ್, ಅಂಬರೀಶ್ ಸೇರಿದಂತೆ ಇಲಾಖೆಯ ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.