ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರೊಬ್ಬರ ಪುತ್ರನಿಗೆ ಸೇರಿದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮನೆ ಕೆಲಸದ ಯುವತಿಯ ಮೃತದೇಹ ಪತ್ತೆಯಾಗಿದೆ. ಆಕೆಯ ಮುಖದ ಮೇಲೆ ನಾಯಿ ಕಚ್ಚಿದ ಗುರುತುಗಳಿದ್ದು, ಅನುಮಾನ ಹುಟ್ಟುಹಾಕಿದೆ.
ಮಧ್ಯಪ್ರದೇಶದ ಛತರ್ಪುರ ಜಿಲ್ಲೆಯ ಖರ್ಗಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಚಂದಾ ಗೌರ್ ಅವರ ಪುತ್ರ ಅಭಿಯಂತ್ ಗೌರ್ ಮನೆಯಲ್ಲಿ ಸಪ್ನಾ ರೈಕ್ವಾರ್ (21) ಎಂಬ ಯುವತಿಯ ಮೃತದೇಹ ದೊರೆತಿದೆ. ಅವರು ಹಲವು ವರ್ಷಗಳಿಂದ ಅಭಿಯಂತ್ ಗೌರ್ ಮನೆಯಲ್ಲಿ ಮನೆ ಕೆಲಸ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ.
ಪೊಲೀಸರ ಪ್ರಕಾರ, ಬೆಳಿಗ್ಗೆ 5:20ರ ಸುಮಾರಿಗೆ ಮನೆಯ ಹಿಂಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಕಂಡುಬಂದಿದೆ. ಮನೆಯಲ್ಲಿದ್ದವರು ತಕ್ಷಣವೇ ಪೊಲೀಸರಿಗೆ ಕರೆ ಮಾಡಿ, ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ಸಿಸಿಟಿವಿ ದೃಶ್ಯವಳಿಗಳು ಆಕೆ ನೇಣು ಬಿಗಿದುಕೊಳ್ಳುತ್ತಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಆಕೆಯ ಮುಖದ ಮೇಲೆ ನಾಯಿ ಕಚ್ಚಿದ ಗಾಯದ ಗುರುತುಗಳು ಕಂಡುಬಂದಿದ್ದು, ಆ ಬಗ್ಗೆಯೂ ವಿಚಾರಣೆ ನಡೆಸುತ್ತಿದ್ದಾರೆ.
ಈ ಲೇಖನ ಓದಿದ್ದೀರಾ:? ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ‘ಬಾಯಲ್ಲಿ ಬೆಲ್ಲ, ಎದೆಯಲ್ಲಿ ಕತ್ತರಿ’ಯಾಗದಿರಲಿ…
ಘಟನೆಯ ಸಮಯದಲ್ಲಿ, ಅಭಿಯಂತ್ ಗೌರ್ ಅವರ ಪತ್ನಿ ಮತ್ತು ಮಗ ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಹೆಚ್ಚಿನ ಮಾಹಿತಿ ಮತ್ತು ಸ್ಪಷ್ಟತೆ ದೊರೆಯಲಿದೆ ಎಂದು ಪೊಲೀಸ್ ಅಧಿಕಾರಿ ಬಲ್ಮಿಕ್ ಚೌಬೆ ಹೇಳಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.