- ಮಾನ್ವಿ ಹಾಗೂ ದೇವದುರ್ಗ ತಾಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ದಂಧೆ
- ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಂತೆ ಮುಖ್ಯಮಂತ್ರಿಗಳಿಗೆ ಮನವಿ
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕುಮ್ಮಕ್ಕಿನಿಂದ ಮಾನ್ವಿ ಹಾಗೂ ದೇವದುರ್ಗ ತಾಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ಆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದೆ. ಕೂಡಲೇ ಜಿಲ್ಲಾಡಳಿತ ಎಚ್ಚೆತುಕೊಂಡು ಅಕ್ರಮ ಮರಳು ದಂಧೆಕೋರರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಂಬೇಡ್ಕರ್ ಸೇನೆ ಒತ್ತಾಯಿಸಿದೆ.
ಈ ಸಂಬಂಧ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ್ ನಾಯಕ ಅವರಿಗೆ ಸಲ್ಲಿಸಿದರು. “ಮಾನ್ವಿ ತಾಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ಧಂದೆ ನಡೆಸುತ್ತಿರುವ ಆಲ್ದಾಳ ವೀರಭದ್ರಪ್ಪ ಹಾಗೂ ದೇವದುರ್ಗ ತಾಲೂಕಿನಲ್ಲಿ ಅಕ್ರಮ ಮರಳು ಸಾಗಣೆ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಕುಮ್ಮುಕ್ಕಿನಿಂದ ಅನಧಿಕೃತವಾಗಿ, ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದೆ . ಅನೇಕ ಸಂಘಟನೆಗಳು ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಂತೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸರಕಾರದ ಸುತ್ತೋಲೆ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿಯಾಗಿ ಲಾರಿಗಳಲ್ಲಿ ಹೆಚ್ಚುವರಿ ಮರಳು ಲೋಡ್ ಮಾಡುವುದು ಹಾಗೂ ನಿಯಮ ಬಾಹೀರವಾಗಿ ಸಾಗಾಣೆ ಮಾಡತ್ತಿದ್ದಾರೆ” ಎಂದು ಆರೋಪಿಸಿದರು.
ಈ ಹಿಂದೆ ದೇವದುರ್ಗ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ ತಡೆಯಲು ಹೋದ ಅಧಿಕಾರಿ ಮೇಲೆ ಟಿಪ್ಪರ್ ಹರಿಸಿ ಕೊಲೆ ಮಾಡಿದ್ದಾರೆ. ಆ.10 ರಂದು ಮಾನ್ವಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಖನಿಜ ಸಂಪತ್ತು ರಕ್ಷಣಾ ಪಡೆಯ ಮಾಜಿ ಯೋಧ ನೀಲಪ್ಪ ಎಂಬುವರು ಅಕ್ರಮ ಗಣಿಗಾರಿಕೆ ಸ್ಥಳಕ್ಕೆ ಹೋದಾಗ ಅವರ ಮೇಲೆ ಮಾರಣಾಂತಿಕ ಹಲ್ಲೆ ಮತ್ತು ಕೊಲೆ ಯತ್ನ ನಡೆಸಿರುವುದು ಖಂಡನೀಯ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾಡಳಿತ ಮತ್ತು ಗಣಿ ಭೂವಿಜ್ಞಾನ ಇಲಾಖೆಯ ಸಹಾಯಕ ನಿರ್ದೇಶಕರು ಮತ್ತು ಇಲಾಖೆಯ ಸಿಬ್ಬಂದಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಪಡಿತರ, ಮನರೇಗಾ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಒತ್ತಾಯ
ಈ ಸಂದರ್ಭದಲ್ಲಿ ಸೇನೆಯ ಅಧ್ಯಕ್ಷ ವಿಶ್ವನಾಥ ಪಟ್ಟಿ, ದೇವೇಂದ್ರ ಕುಮಾರ, ಅಮರಯ್ಯ, ತಿಮ್ಮಪ್ಪ, ಚಂದ್ರು, ನಾಗರಾಜ, ಕುಮಾರಸ್ವಾಮಿ ಸೇರಿದಂತೆ ಅನೇಕರಿದ್ದರು.