ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭ್ರಷ್ಟಾಚಾರ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂಬ ಬೇಡಿಕೆಯಿಂದಾಗಿ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘದ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತನಿಖೆ ವಿಳಂಬಗೊಳಿಸುತ್ತಿರುವ ಜಿಲ್ಲಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಹಾಸಂಘದ ಸಂಸ್ಥಾಪಕ ಅಧ್ಯಕ್ಷ ಬೀರಪ್ಪ ದೇಶನೂರ ಅವರು, “2017ರಿಂದ 2023ರವರೆಗೆ ಮಾತ್ರ ಸರ್ಕಾರ ತನಿಖೆಗೆ ಆದೇಶ ನೀಡಿದೆ. ಆದರೆ 2024 ಮತ್ತು 2025ರಲ್ಲಿ ಹೆಚ್ಚಿನ ಭ್ರಷ್ಟಾಚಾರ ನಡೆದಿದ್ದು, ಅದನ್ನು ಮುಚ್ಚಿಹಾಕಲು ಪ್ರಯತ್ನವಾಗುತ್ತಿದೆ. ಹೀಗಾಗಿ ಈ ಅವಧಿಯ ತನಿಖೆಯೂ ಅಗತ್ಯ. ನಿಷ್ಪಕ್ಷಪಾತ ತನಿಖೆ ನಡೆಯಬೇಕು, ತಪ್ಪಿತಸ್ಥರನ್ನು ಕಾನೂನಿನ ಮುಂದಿಡಬೇಕು” ಎಂದು ಆಗ್ರಹಿಸಿದರು.
ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಕಾರ್ಖಾನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದರೂ, ತನಿಖೆ ಕಾರ್ಖಾನೆ ಪರವಾಗಿ ಸಾಗುತ್ತಿದೆ ಎಂಬ ಆರೋಪ ಪ್ರತಿಭಟನಾಕಾರರಿಂದ ಕೇಳಿಬಂದಿತು.
ರೈತರು ಸರ್ಕಾರ ತಕ್ಷಣವೇ ಆದೇಶ ಹೊರಡಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿದರು.