ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ಮೆಟ್ರೋ ವಿಸ್ತರಣೆ ವಿಮಾ ಯೋಜನೆಗಳ ಲಾಭಾಂಶ ಘೋಷಣೆಯಿಂದ ಹಿಡಿದು ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಮತ್ತು ಚುನಾವಣಾ ಸುಧಾರಣೆಗಳವರೆಗೆ ವ್ಯಾಪಕ ವಿಷಯಗಳಿಗೆ ನಿರ್ಣಯ ಕೈಗೊಳ್ಳಲಾಯಿತು.
ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯ ವಿಮಾದಾರರಿಗೆ 2020ರಿಂದ 2022ರವರೆಗಿನ ಅವಧಿಯಲ್ಲಿ ಪ್ರತಿ ಸಾವಿರ ರೂಪಾಯಿಗಳಿಗೆ ವಾರ್ಷಿಕ 80 ರೂಪಾಯಿ ಲಾಭಾಂಶವನ್ನು ಘೋಷಿಸಲು ನಿರ್ಧರಿಸಲಾಗಿದ್ದು, ಅಲ್ಲದೆ 2022ರಿಂದ 2024ರವರೆಗಿನ ಅವಧಿಯಲ್ಲಿ ಮಧ್ಯಂತರ ಲಾಭಾಂಶವನ್ನೂ ಅದೇ ದರದಲ್ಲಿ ನೀಡಲು ಅನುಮೋದನೆ ನೀಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ “ಆಶಾಕಿರಣ” ಯೋಜನೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 52.85 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆಯನ್ನೂ ಸಭೆಯಲ್ಲಿ ನೀಡಲಾಗಿದೆ.ಸಭೆಯಲ್ಲಿ ಒಳಾಡಳಿತ ಇಲಾಖೆಯಡಿ “ಕರ್ನಾಟಕ ಇ-ಸಾಕ್ಷ್ಯ ನಿರ್ವಹಣಾ ನಿಯಮಗಳು, 2025”ಕ್ಕೆ ಅನುಮೋದನೆ ನೀಡಲಾಗಿದೆ
ಕನಪಪುರದಲ್ಲಿ ವೈದ್ಯಕೀಯ ಕಾಲೇಜಿಗೆ ಜಮೀನು
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು ಮೊದಲ ಹಂತದಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ 65 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಜಮೀನು ಖರೀದಿಗೆ ಅನುಮೋದನೆ ನೀಡಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್‌ನಿಂದ ನೀಡಲಾಗುತ್ತಿರುವ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಕಾರ್ಯಕ್ರಮವನ್ನು ವಾರಕ್ಕೆ ಮೂರು ದಿನಗಳ ಬದಲು ಐದು ದಿನಗಳಿಗೆ ವಿಸ್ತರಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ರಾಜ್ಯ ಸರ್ಕಾರದಿಂದ 27.02 ಕೋಟಿ ರೂಪಾಯಿಗಳನ್ನು ಭರಿಸಲು ಅನುಮೋದನೆ ನೀಡಲಾಗಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ನಗರದ ವಿವಿಧ ಸ್ಥಳಗಳಲ್ಲಿ ಹೊಸದಾಗಿ ಆರು ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ನಿರ್ಮಾಣ ಮತ್ತು ಏಳು ವರ್ಷಗಳ ನಿರ್ವಹಣೆಗೆ 956.67 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಅಲ್ಲದೆ ಕೆಂಗೇರಿಯ 60 ಎಂಎಲ್‌ಡಿ ಸಾಮರ್ಥ್ಯದ ಘಟಕವನ್ನು 80 ಎಂಎಲ್‌ಡಿಗೆ ಉನ್ನತೀಕರಿಸಲು 28.88 ಕೋಟಿ ರೂಪಾಯಿಗಳ ಯೋಜನೆಗೂ ಅನುಮೋದಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ಶಾಖಾ ಕಾಲುವೆ ಕಾಮಗಾರಿಗೆ ಅಗತ್ಯವಿರುವ 221 ಎಕರೆ ಜಮೀನನ್ನು 77.35 ಕೋಟಿ ರೂಪಾಯಿಗಳಲ್ಲಿ ನೇರ ಖರೀದಿಯ ಮೂಲಕ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಲಾಗಿದ್ದು, ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ 107 ಕೆರೆಗಳಿಗೆ ಬೇಡ್ತಿ ನದಿಯಿಂದ ನೀರು ಎತ್ತಿ ತುಂಬಿಸುವ ಯೋಜನೆಯನ್ನು 179.50 ಕೋಟಿ ರೂಪಾಯಿಗಳಲ್ಲಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.
ಮೆಟ್ರೋ ವಿಸ್ತರಣೆ
ನಗರಾಭಿವೃದ್ಧಿ ಇಲಾಖೆಯಡಿ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ರಲ್ಲಿ ಜೆಪಿ ನಗರದಿಂದ ಹೆಬ್ಬಾಳದವರೆಗೆ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗೆ 37.121 ಕಿಮೀ ಉದ್ದದ ಡಬಲ್ ಡೆಕ್ಕರ್ ಮಾರ್ಗ ನಿರ್ಮಾಣಕ್ಕೆ 9700 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆಯಾಗಿದ್ದು, ರಾಜ್ಯ ಸರ್ಕಾರವು 2025-26ನೇ ಸಾಲಿನ ಬಜೆಟ್‌ನಲ್ಲಿ 4000 ಕೋಟಿ ರೂಪಾಯಿಗಳನ್ನು ಒದಗಿಸಿ ಸಂಪೂರ್ಣ ವೆಚ್ಚವನ್ನು ಭರಿಸಲಿದೆ.
ವಿಜಯಪುರ ಜಿಲ್ಲೆಯ ಸಿಂಧಗಿ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿ “ಸಿಂಧಗಿ ನಗರಸಭೆ” ಎಂದು ಘೋಷಿಸಲು ನಿರ್ಧರಿಸಲಾಗಿದ್ದು, ಇದೇ ರೀತಿ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮಾ ಪುರಸಭೆಯನ್ನು “ಸವದತ್ತಿ ಯಲ್ಲಮ್ಮ ನಗರಸಭೆ” ಮತ್ತು ಬೀದರ್ ಜಿಲ್ಲೆಯ ಹುಮನಾಬಾದ್ ಪುರಸಭೆಯನ್ನು “ಹುಮನಾಬಾದ್ ನಗರಸಭೆ”ಯನ್ನಾಗಿ ಘೋಷಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶಪಾಂಡೆ ದುರ್ವರ್ತನೆ: ವಯಸ್ಸಾದರೂ ಬುದ್ಧಿ ಬರಲಿಲ್ಲವೇ?
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ರಾಜ್ಯದ 22 ವಿಧಾನಸಭಾ ಕ್ಷೇತ್ರಗಳಲ್ಲಿ 40 ಕಾಮಗಾರಿಗಳ ಮೂಲಕ ಅತೀ ಹಿಂದುಳಿದ ಕಾಲೋನಿಗಳನ್ನು ಮಾದರಿ ಕಾಲೋನಿಗಳನ್ನಾಗಿ 398 ಕೋಟಿ ರೂಪಾಯಿಗಳಲ್ಲಿ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿದ್ದು, ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) 2025 ಮತ್ತು ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ 2025ಕ್ಕೆ ಘಟನೋತ್ತರ ಅನುಮೋದನೆ ನೀಡಲು ನಿರ್ಧರಿಸಲಾಗಿದೆ. ಆರೋಗ್ಯ ಇಲಾಖೆಯಡಿ ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನುಸರಣೀಯ ಆಸ್ಪತ್ರೆ ನಿರ್ವಹಣಾ ವ್ಯವಸ್ಥೆಯನ್ನು ಹಂತವಾರು ಅನುಷ್ಠಾನಗೊಳಿಸಲು ತಾತ್ವಿಕ ಅನುಮೋದನೆ ನೀಡಲಾಗಿದ್ದು, ಮೊದಲ ಹಂತಕ್ಕೆ ವಾರ್ಷಿಕ 20.60 ಕೋಟಿ ರೂಪಾಯಿಗಳ ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆಯಾಗಿದೆ.
ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ 50 ಹಾಸಿಗೆಗಳ ಸಾಮರ್ಥ್ಯದ ತೀವ್ರ ನಿಗಾ ಘಟಕ ನಿರ್ಮಾಣಕ್ಕೆ 24.22 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಭಾರತ ಸರ್ಕಾರದ ಸಿಟಿಆರ್‌ಎವಿ ಯೋಜನೆಯಡಿ ಪ್ರತಿ ಫಲಾನುಭವಿಗೆ 1.5 ಲಕ್ಷ ರೂಪಾಯಿ ಸಹಾಯಕ್ಕೆ ರಾಜ್ಯದಿಂದ ಹೆಚ್ಚುವರಿ 1 ಲಕ್ಷ ರೂಪಾಯಿ ನೆರವು ನೀಡಲು ಮತ್ತು ರಾಜ್ಯ ಅಪಘಾತ ಪೀಡಿತರ ಯೋಜನೆಗೆ ತಿದ್ದುಪಡಿ ಮಾಡಲು ನಿರ್ಧರಿಸಲಾಗಿದೆ.
ಕರ್ನಾಟಕ ಗೃಹ ಮಂಡಳಿಯು ಬೆಂಗಳೂರು ಜಿಲ್ಲೆಯ ಯಲಹಂಕ ತಾಲ್ಲೂಕಿನಲ್ಲಿ ಭೂಸ್ವಾಧೀನಪಡಿಸಿದ ಜಮೀನಿನಲ್ಲಿ 50:50 ಅನುಪಾತದ ಪಾಲುದಾರಿಕೆಯಡಿ ಭೂಮಾಲೀಕರಿಗೆ ಅಭಿವೃದ್ಧಿಪಡಿಸಿದ ಜಮೀನು ನೀಡಿ, ಮಂಡಳಿಯ ಪಾಲಿನಲ್ಲಿ ಖಾಸಗಿ ಡೆವಲಪರ್‌ಗಳೊಂದಿಗೆ ಇಂಟಿಗ್ರೇಟೆಡ್ ಹೈಟೆಕ್ ಟೌನ್‌ಶಿಪ್ ಅಭಿವೃದ್ಧಿಗೆ 2930 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಲಾಗಿದೆ. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಪರಿಷ್ಕೃತ 6334.01 ಲಕ್ಷ ರೂಪಾಯಿಗಳ ಅನುಮೋದನೆ ನೀಡಲಾಗಿದ್ದು, ಕೊಪ್ಪಳ ವೈದ್ಯಕೀಯ ಸಂಸ್ಥೆಯಲ್ಲಿ 100 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮತ್ತು ರಾಜ್ಯ ಸರ್ಕಾರದ ಅನುದಾನದೊಂದಿಗೆ ಅನುಮೋದಿಸಲಾಗಿದೆ.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 14 ಜಿಲ್ಲೆಗಳಲ್ಲಿ 20 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು 15.45 ಕೋಟಿ ರೂಪಾಯಿಗಳಲ್ಲಿ ಪ್ರಾರಂಭಿಸಲು ಅನುಮೋದನೆ ನೀಡಲಾಗಿದ್ದು, ಕೌಶಲ್ಯಾಭಿವೃದ್ಧಿ ಇಲಾಖೆಯಡಿ ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಹೊಸ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ 147.50 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದಿಸಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಸೋಲೂರು ಹೋಬಳಿಯನ್ನು ಬೇರ್ಪಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿಗೆ ಸೇರ್ಪಡೆ ಮಾಡಲು ನಿರ್ಧರಿಸಲಾಗಿದ್ದು, ರಾಜ್ಯ ಚುನಾವಣಾ ಆಯೋಗಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಅಗತ್ಯ ಕಾನೂನು ತಿದ್ದುಪಡಿ ಮತ್ತು ನಿಯಮಾವಳಿ ರಚನೆ ಮಾಡಲು ಅನುಮೋದನೆ ನೀಡಲಾಗಿದೆ.
ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಶಿಫಾರಸು ಮಾಡಲು ನಿರ್ಧರಿಸಲಾಗಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು ಉತ್ತಮ ಗುಣಮಟ್ಟಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ಣಯಿಸಲಾಗಿದೆ. ಇದಲ್ಲದೆ, ಮತದಾರರ ಪಟ್ಟಿ ತಯಾರಿಕೆಯಲ್ಲಿ ದೊಡ್ಡ ಪ್ರಮಾಣದ ವ್ಯತ್ಯಾಸಗಳು ಮತ್ತು ದೂರುಗಳ ಹಿನ್ನೆಲೆಯಲ್ಲಿ ಇವಿಎಂಗಳ ವಿಶ್ವಾಸಾರ್ಹತೆ ಕಡಿಮೆಯಾಗುತ್ತಿರುವುದನ್ನು ಗಮನಿಸಿ, ಜನರ ಅಭಿಪ್ರಾಯದ ಆಧಾರದಲ್ಲಿ ಬ್ಯಾಲೆಟ್ ಮೂಲಕ ಚುನಾವಣೆ ನಡೆಸುವುದೇ ಸಭೆಯ ಹಿನ್ನೆಲೆಯಾಗಿದೆ. ಮುಂದಿನ 15 ದಿನಗಳಲ್ಲಿ ಅಗತ್ಯ ಕಾನೂನು ಬದಲಾವಣೆಗಳನ್ನು ಮಾಡಲಾಗುವುದು ಎಂದು ಸಚಿವ ಸಂಪುಟ ಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ.
