ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರದ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಚಾರಣೆಗಾಗಿ ರಾಜ್ಯ ಸರ್ಕಾರ ರಚನೆ ಮಾಡಿದ್ದ ವಿಶೇಷ ತನಿಖಾ ದಳ(ಎಸ್‌ಐಟಿ)ಕ್ಕೆ ಏಕ ಸದಸ್ಯಪೀಠ ನೀಡಿದ್ದ ಮಧ್ಯಂತರ ಆದೇಶವನ್ನು ದ್ವಿಸದಸ್ಯ ಪೀಠ ಸೋಮವಾರ ತೆರವುಗೊಳಿಸಿದೆ.
ಈ ಆದೇಶದಿಂದ ಸರ್ಕಾರಿ ಜಮೀನು ಒತ್ತುವರಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುವ ಪ್ರಕ್ರಿಯೆ ಸುಗಮವಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯಬೇಕಿದೆ.
ಪ್ರಕರಣ ಸಂಬಂಧ ಲೋಕಾಯುಕ್ತ ನೀಡಿದ್ದ ವರದಿ ಜಾರಿಗೊಳಿಸಲು ಹೈಕೋರ್ಟ್ ಆದೇಶ ನೀಡಿದ್ದರೂ ಪಾಲಿಸಿಲ್ಲ ಎಂದು ಆಧಿಕ್ಷೇಧಿಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ಅವರಿಂದ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯಪೀಠದಿಂದ ಭೂಮಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿತ್ತು.
ಆ ನಂತರ ಜಮೀನಿನ ಸರ್ವೆ ಕಾರ್ಯ ನಡೆಸಿದ ಸ್ಥಳೀಯ ತಹಸೀಲ್ದಾರ್, ಹೆಚ್ ಡಿ ಕುಮಾರಸ್ವಾಮಿ ಮತ್ತಿತರರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಆ ನಂತರ ಆ ಬಗ್ಗೆ ತನಿಖೆ ನಡೆಸಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲು ಸರ್ಕಾರ ಹಿರಿಯ ಐಎಎಸ್ ಅಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚನೆ ಮಾಡಲಾಗಿತ್ತು.
ಇದನ್ನು ಪ್ರಶ್ನಿಸಿ ಹೆಚ್ಡಿಕೆ ಮತ್ತಿತರರಿಂದ ಏಕಸದಸ್ಯಪೀಠದ ಮುಂದೆ ಅರ್ಜಿಸಲ್ಲಿಕೆಯಾಗಿತ್ತು. ಎಸ್‌ಐಟಿ ರಚನೆ ಆದೇಶಕ್ಕೆ ನ್ಯಾಯಾಲಯ ತಡೆ ನೀಡಿತ್ತು. ಹಿರಿಯ ಐಎಎಸ್ ಅಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದ ಸರ್ಕಾರದ ಆದೇಶಕ್ಕೆ ತಡೆ ನೀಡಿರುವ ಏಕ ಸದಸ್ಯಪೀಠದ ಮಧ್ಯಂತರ ಆದೇಶದ ವಿರುದ್ದ ರಾಜ್ಯ ಸರ್ಕಾರ ಮೇಲ್ಮವಿ ಅರ್ಜಿ ಸಲ್ಲಿಸಿತ್ತು.
ಈ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯಪೀಠ, ತಡೆಯಾಜ್ಞೆ ತೆರವುಗೊಳಿಸಿದೆ. ಅಲ್ಲದೆ, ಹೆಚ್ಡಿಕೆ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದೆ.
ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ಅವರು ಈ ವಿಚಾರವಾಗಿ ಈ ದಿನ.ಕಾಮ್ ಜೊತೆ ಮಾತನಾಡಿ, ” ದ್ವಿಸದಸ್ಯ ಪೀಠದ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ನ್ಯಾಯಾಂಗದ ಮೇಲೆ ಯಾವತ್ತಿಗೂ ನನಗೆ ನಂಬಿಕೆ ಇದೆ. ಕುಮಾರಸ್ವಾಮಿ ಮನೆತನದ ಪ್ರಜ್ವಲ್ ರೇವಣ್ಣ ಪ್ರಕರಣ ಹೇಗೆ ತಾರ್ಕಿಕ ಅಂತ್ಯ ಕಂಡು ಅವನು ಜೈಲು ಸೇರಿದ್ದಾನೋ ಹಾಗೆಯೇ ಕುಮಾರಸ್ವಾಮಿ ಮತ್ತು ಮತ್ತು ಸಂಬಂಧಿಕರು ಜೈಲು ಸೇರಬೇಕು” ಎಂದು ಹೇಳಿದರು.
ಏನಿದು ಪ್ರಕರಣ
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಇರುವ ಹಲವಾರು ಅಕ್ರಮ, ಭ್ರಷ್ಟಾಚಾರ ಪ್ರಕರಣಗಳಲ್ಲಿ ಭೂ ಒತ್ತುವರಿ ಪ್ರಕರಣವೂ ಒಂದು. ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ಮತ್ತು ಸಂಬಂಧಿಗಳ ಒಟ್ಟು 110.3 ಎಕರೆ ಭೂಮಿ ಹೊಂದಿದ್ದು, ಆ ಪೈಕಿ ಬರೋಬ್ಬರಿ 70 ಎಕರೆ ಭೂಮಿ ಸರ್ಕಾರದ್ದಾಗಿದ್ದು, ಆ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.
ಬಿಡದಿಯ ಕೇತಗಾನಹಳ್ಳಿಯಲ್ಲಿ ಸರ್ವೇ ನಂಬರ್ 7, 8, 9, 10, 16, 17 ಮತ್ತು 79ರಲ್ಲಿ ಸುಮಾರು 70 ಎಕರೆ ಸರ್ಕಾರಿ ಭೂಮಿಯನ್ನು ಕುಮಾರಸ್ವಾಮಿ ಮತ್ತು ಸಂಬಂಧಿಗಳು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸರ್ಕಾರಿ ಗೋಮಾಳವನ್ನು 1983-84ರಲ್ಲೇ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಸುಮಾರು ವರ್ಷಗಳ ಹಿಂದೆಯೇ ಮಂಡ್ಯದ ಮಾಜಿ ಸಂಸದ ಜಿ. ಮಾದೇಗೌಡರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲು 2014ರ ಆಗಸ್ಟ್ 4ರಂದೇ ಲೋಕಾಯುಕ್ತರು ಆದೇಶಿಸಿದ್ದರು.