ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಹನುಮಂತ ಕುಂಬಾರ ಎಂಬ ಆರೋಪಿಯ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯದ ನ್ಯಾಯಾಧೀಶ ಕುಮಾರ ಡಿ.ಕೆ. ಅವರು ದಂಡ ಸಹಿತ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಕುಷ್ಟಗಿ ತಾಲೂಕಿನ ಪರಮನಹಟ್ಟಿಯ ಹನುಮಂತ ಕುಂಬಾರ ಎಂಬ ವ್ಯಕ್ತಿಯು ಪರಿಶಿಷ್ಟ ಜಾತಿಗೆ ಸೇರಿದ ಬಾಲಕಿಯನ್ನು ಪರಿಚಯಿಸಿಕೊಂಡು, ಸಲಿಗೆ ಬೆಳೆಸಿ ಪ್ರೀತಿಸುತ್ತಿರುವುದಾಗಿ ಹಾಗೂ ಮದುವೆಯಾಗುವುದಾಗಿ ಪುಸಲಾಯಿಸಿ 2023ರ ಮೇ ಬಳಿಕ ಹಲವಾರು ಬಾರಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಜುಲೈನಲ್ಲಿ ಆಕೆಯನ್ನು ಮತ್ತೆ ನಂಬಿಸಿ ಬೆಂಗಳೂರಿಗೆ ಕರೆದೊಯ್ದಿರುತ್ತಾನೆ. ಈ ಹಿನ್ನೆಲೆ ಬೇವೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಕೊಪ್ಪಳ | ಪ್ರೌಢ ಶಾಲೆ ವಿದ್ಯಾರ್ಥಿನಿ ಗರ್ಭಿಣಿ : ಪೋಕ್ಸೊ ದಾಖಲು, ಯುವಕನ ಬಂಧನ
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿತನ ಮೇಲಿನ ಆರೋಪಗಳು ಸಾಬೀತಾದ್ದರಿಂದ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.30 ಸಾವಿರಗಳ ದಂಡವನ್ನು ವಿಧಿಸಿದ್ದಾರೆ. ಸಂತ್ರಸ್ತೆಗೆ ಸರ್ಕಾರದಿಂದ ರೂ.6 ಲಕ್ಷಗಳ ಪರಿಹಾರ ನೀಡಲು ಆದೇಶಿಸಿ ತೀರ್ಪು ಪ್ರಕಟಿಸಿದ್ದಾರೆ.