ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಕೇಸ್ವಾನ್ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಇದೇ ಸೆಪ್ಟೆಂಬರ್. 15 ರಂದು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಯಶಸ್ವಿಗೊಳಿಸಬೇಕಿದೆ. ಸೆಪ್ಟೆಂಬರ್. 15 ರಂದು ಬೆಳಿಗ್ಗೆ ಜಿಲ್ಲಾಡಳಿತ ಭವನದ ಮುಂಭಾಗದಿಂದ ಜಿಲ್ಲಾ ಕೇಂದ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗಿರುವ ಸೈಕಲ್ ಜಾಥಾಗೆ ಚಾಲನೆ ನೀಡಲಾಗುತ್ತದೆ. ಇದಕ್ಕೂ ಮೊದಲು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಚಾಮರಾಜನಗರದಿಂದ ಬೆಂಗಳೂರಿಗೆ ರೋಟರಿ ಸಂಸ್ಥೆಯ ಸಹಯೋಗದೊಂದಿಗೆ ಬೈಕ್ ರ್ಯಾಲಿ ಹೊರಡಲಿದೆ ಎಂದರು.
ನಗರ ವ್ಯಾಪ್ತಿಯಲ್ಲಿ ನಡೆಯಲಿರುವ ಸೈಕಲ್ ಜಾಥಾಗೆ ಎನ್ಎಸ್ಎಸ್, ನೆಹರು ಯುವ ಕೇಂದ್ರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಸಾರ್ವಜನಿಕರು, ವಿದ್ಯಾರ್ಥಿಗಳು, ಅಧಿಕಾರಿ ಸಿಬ್ಬಂದಿ ಭಾಗವಹಿಸಲು ಅವಕಾಶವಿದೆ. ಸೈಕಲ್ ಜಾಥಾ ಸಂಚರಿಸುವ ಸ್ಥಳಗಳಿಗೆ ಪ್ರತಿ 1.5 ಕಿ.ಮೀ ಗೆ ಸಿಬ್ಬಂದಿ ನಿಯೋಜಿಸಬೇಕು. ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಸಿಬ್ಬಂದಿ ವೈದ್ಯಕೀಯ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವು ಜಿಲ್ಲಾಡಳಿತ ಭವನದ ಮುಂಭಾಗ ನಡೆಯಲಿದ್ದು, ಸ್ವಚ್ಚತೆ ಮಾಡಬೇಕು. ಸೆಲ್ಫಿ ಪಾಯಿಂಟ್ ವ್ಯವಸ್ಥೆಯು ಇರಬೇಕು. ಸಂವಿಧಾನ ಪೀಠಿಕೆ ವಾಚನ ಇನ್ನಿತರ ವೇದಿಕೆ ಕಾರ್ಯಕ್ರಮಗಳು ಸುಸೂತ್ರವಾಗಿ ಹಾಗೂ ಯಶಸ್ವಿಯಾಗಿ ನಡೆಸುವ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಲೋಪವಿಲ್ಲದೇ ನಿಗದಿಪಡಿಸಿರುವ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ವಿಕಲಚೇತನರಿಗೆ ಸಾಧನ ಸಲಕರಣೆ ಸೌಲಭ್ಯಕ್ಕಾಗಿ ತಪಾಸಣಾ ಶಿಬಿರ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ. ಎನ್. ಶಶಿಧರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್. ಎಸ್. ಬಿಂದ್ಯಾ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇಅರಸ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಎಂ. ವಿ. ಸುಧಾ, ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸುರೇಶ್, ಇನ್ನಿತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.