ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಪೈಕಿ ಇಂಜಿನಿಯರಿಂಗ್ ವಿದ್ಯಾರ್ಥಿಗಳೂ ಕೂಡ ಸೇರಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದ್ದಾರೆ.
ಆರೋಪಿ ಚಾಲಕ ಭುವನೇಶ್(25) ಸೇರಿದಂತೆ 20 ಮಂದಿ ಗಾಯಾಳುಗಳಾಗಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ ಮೂರು ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.
ಮೃತರ ವಿವರ ಹೀಗಿದೆ.
- ಪ್ರವೀಣ್ ಕುಮಾರ್, ಅಂತಿಮ ಬಿಇ ವಿದ್ಯಾರ್ಥಿ, ಬಳ್ಳಾರಿ
- ರಾಜೇಶ (17) ಕೆ.ಬಿ.ಪಾಳ್ಯ, ಹಳೆಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು
- ಈಶ್ವರ (17) ಡನಾಯಕನಹಳ್ಳಿ ಕೊಪ್ಪಲು, ಹೊಳೆನರಸೀಪುರ ತಾಲ್ಲೂಕು
- ಗೋಕುಲ (17) ಮುತ್ತಿಗೆಹೀರಳ್ಳಿ ಗ್ರಾಮ, ಹೊಳೆನರಸೀಪುರ ತಾಲ್ಲೂಕು
- ಕುಮಾರ (25) ಕಬ್ಬಿನಹಳ್ಳಿ ಗ್ರಾಮ, ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
- ಪ್ರವೀಣ (25) ಕಬ್ಬಿನಹಳ್ಳಿ ಗ್ರಾಮ ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು.
- ಮಿಥುನ್ (23) ಗವಿಗಂಗಾಪುರ ಗ್ರಾಮ, ಹೊಸದುರ್ಗ ತಾಲೂಕು ಚಿತ್ರದುರ್ಗ ಜಿಲ್ಲೆ.
- ಸುರೇಶ ಬಿಇ ವಿದ್ಯಾರ್ಥಿ ಮಣೆನಹಳ್ಳಿ ಮರ್ಲೆ ಗ್ರಾಮ, ಚಿಕ್ಕಮಗಳೂರು ಜಿಲ್ಲೆ
- ಪ್ರಭಾಕರ್ (55) ಬಂಟರಹಳ್ಳಿ, ಹಾಸನ ತಾಲ್ಲೂಕು
ಗಣಪತಿ ವಿಸರ್ಜನಾ ಮೆರವಣಿಗೆ ದುರಂತ ಪ್ರಕರಣದ ಹಿನ್ನೆಲೆಯಲ್ಲಿ ಜೆ.ಡಿ.ಎಸ್. ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಕುಟುಂಬದ ಸದಸ್ಯರನ್ನು ಮಾತನಾಡಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಸ್ವರೂಪ್ , ಒಕ್ಕಲಿಗರ ರಾಜ್ಯ ಕಾರ್ಯದರ್ಶಿ ಸುಮುಖ ರಘು ಉಪಸ್ಥಿತರಿದ್ದರು.
ತಡರಾತ್ರಿಯಲ್ಲೇ ಕಾರ್ಯಪ್ರವೃತ್ತರಾದ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ
ಹಾಸನ ದುರಂತದಲ್ಲಿ ಮೃತಪಟ್ಟ ಎಲ್ಲರ ಮೃತ ದೇಹಗಳನ್ನು ರಾತ್ರಿಯ ಮರಣೋತ್ತರ ಪರೀಕ್ಷೆ ಮಾಡಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿರುವ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡರು ಬೆಳಗಿನ ಬೆಳಗಿನ ಜಾವ ಮೂರು ಗಂಟೆಯವರೆಗೂ ಎಲ್ಲ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದರು.
ಎಲ್ಲ ಮೃತದೇಹಗಳು ಮರಣೋತ್ತರ ಪರೀಕ್ಷೆಯಾಗಿ ಅವರ ಕುಟುಂಬಸ್ಥರಿಗೆ ಹಸ್ತಾಂತರ ಮಾಡುವಂತೆ ಎಲ್ಲರ ಜೊತೆ ಸತತ ಸಂಪರ್ಕದಲ್ಲಿದ್ದು, ರಾತ್ರಿಯ ಮರಣೋತ್ತರ ಪರೀಕ್ಷೆ ಮಾಡಿ ಮೃತದೇಹಗಳನ್ನು ಹಸ್ತಾಂತರ ಮಾಡಲಾಗಿದೆ.

ರಾತ್ರಿ ಇಡೀ ಮುಖ್ಯಮಂತ್ರಿಗಳ ಜೊತೆ ಸಂಪರ್ಕದಲ್ಲಿದ್ದ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ, ಎಲ್ಲ ನಿಮಿಷದ ಅಪ್ಡೇಟ್ ಗಳನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದ್ದರು.
ಆಗಲೇ ಹಾಸನದತ್ತ ಹೊರಟಿರುವ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಮೊದಲು ಐಬಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ನಂತರ ದುರಂತ ಸ್ಥಳಕ್ಕೆ ಭೇಟಿ ನೀಡಿ ನಂತರ ಗಾಯಾಳುಗಳನ್ನು ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ನಂತರ ಮೃತರ ಮನೆಗಳಿಗೂ ಕೂಡ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ವಲಯ ಈದಿನ ಡಾಟ್ ಕಾಮ್‌ಗೆ ಮಾಹಿತಿ ನೀಡಿದೆ.
