ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪೀಠ ವಜಾಗೊಳಿಸಿದೆ.
ಮುಖ್ಯ ನ್ಯಾ. ವಿಭು ಬಬ್ರು ಮತ್ತು ನ್ಯಾ. ಸಿ.ಎಂ.ಜೋಶಿ ಅವರ ವಿಭಾಗೀಯ ನ್ಯಾಯಪೀಠವು ಸೋಮವಾರ (ಸೆ.15) ಪ್ರತಾಪ್ ಸಿಂಹ ಮತ್ತು ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ವಜಾ ಮಾಡಿದೆ.
ನಾಡಹಬ್ಬ ದಸರಾ ಹಿಂದೂ ಧಾರ್ಮಿಕ ಸಂಪ್ರದಾಯ, ಆಚರಣೆಯ ಅವಿಭಾಜ್ಯ ಅಂಗವಾಗಿದೆ. ಹಾಗಿರುವಾಗ ಹಿಂದೂ ಅಲ್ಲದ ಬಾನು ಮುಸ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದನ್ನು ಹಿಂಪಡೆಯುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಗಿರೀಶ್ ಕುಮಾರ್ ಮತ್ತು ಗೌರವ್ ಎಂಬವರು ಪ್ರತ್ಯೇಕ 3 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದರು.
ಸರ್ಕಾರದ ನಿರ್ಧಾರದಿಂದ ಅರ್ಜಿದಾರರ ಯಾವುದೇ ಕಾನೂನಾತ್ಮಕ ಅಥವಾ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ ಆಗುತ್ತಿಲ್ಲ ಎಂದು ಹೇಳಿರುವ ಹೈಕೋರ್ಟ್, ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ. ಅರ್ಜಿದಾರರಿಗೆ ದಂಡ ವಿಧಿಸುವಂತೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಾಡಿದರು. ಆದರೆ ಇದಕ್ಕೆ ಪೀಠ ನಿರಾಕರಿಸಿತು.
ಪ್ರತಾಪ್ ಸಿಂಹ ಪರ ವಕೀಲ ಎಸ್ ಸುದರ್ಶನ್ ಅವರು “ಬಾನು ಮುಷ್ತಾಕ್ ಅವರು ಹಿಂದೂ ಸಂಪ್ರದಾಯ ವಿರೋಧಿ ಮತ್ತು ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ. ದಸರಾ ಉದ್ಘಾಟನೆಗೆ ಆಯ್ಕೆಯಾದವರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡುವುದು ಶಿಷ್ಟಾಚಾರ. ಇದನ್ನು ಪಾಲಿಸಲಾಗಿಲ್ಲ. ಬಾನು ಮುಷ್ತಾಕ್ ಅವರಿಗೆ ಅರಿಶಿಣ-ಕುಂಕುಮದ ಮೇಲೆ ನಂಬಿಕೆ ಇಲ್ಲ. ದಸರಾ ಹಿಂದೂ ಹಬ್ಬವಾಗಿದ್ದು, ಜಾತ್ಯತೀತ ಹಬ್ಬವಲ್ಲ” ಎಂದರು.
ಇದಕ್ಕೆ ಪೀಠವು “ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಲು ನಿಮಗೆ ಸಾಂವಿಧಾನಿಕ ಮತ್ತು ಕಾನೂನಾತ್ಮಕ ಹಕ್ಕು ಏನಿದೆ ಹೇಳಿ? ಶಿಷ್ಟಾಚಾರ ಪಾಲಿಸುವುದು ಅವರಿಗೆ ಸೇರಿದ ವಿಚಾರ” ಎಂದು ಹೇಳಿತು.