ಶಿವಮೊಗ್ಗ, ಬಹು ಅಂಗಾಂಗ ವೈಫಲ್ಯದಿಂದ ಗಂಭೀರ ಸ್ಥಿತಿಯಲ್ಲಿದ್ದ 21 ವರ್ಷದ ಯುವಕನೊಬ್ಬನನ್ನು ಶಿವಮೊಗ್ಗದಿಂದ ಮಣಿಪಾಲ್‌ಗೆ ತುರ್ತಾಗಿ ಸಾಗಿಸಲು ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ‘ಝೀರೋ ಟ್ರಾಫಿಕ್’ ವ್ಯವಸ್ಥೆ ಕಲ್ಪಿಸುವ ಮೂಲಕ ನೆರವಾಗಿದ್ದಾರೆ.
ತೀರ್ಥಹಳ್ಳಿ ತಾಲ್ಲೂಕಿನ ಶಂಕರಳ್ಳಿ ಗ್ರಾಮದ ಶ್ರೇಯಾಂಕ್ ಎಂಬ ಯುವಕ ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಆರಂಭದಲ್ಲಿ ತಾಲ್ಲೂಕು ಆಸ್ಪತ್ರೆ ಮತ್ತು ಮೆಗ್ಗಾನ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ, ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ತಕ್ಷಣ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಲಾಯಿತು. ಈ ವೇಳೆ, ರೋಗಿಯನ್ನು ಯಾವುದೇ ವಿಳಂಬವಿಲ್ಲದೆ ತಲುಪಿಸಲು ಪಶ್ಚಿಮ ಸಂಚಾರಿ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದಾರೆ.