ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಗಳ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ ₹200 ಮೊತ್ತದ ಏಕರೂಪ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ರಾಜ್ಯ ಸರ್ಕಾರವು ‘ಕರ್ನಾಟಕ ಸಿನಿಮಾ, ನಿಯಂತ್ರಣ ಮತ್ತು ತಿದ್ದುಪಡಿ ನಿಯಮಗಳು-2025’ಕ್ಕೆ ತಿದ್ದುಪಡಿ ತಂದು ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಟಿಕೆಟ್ ದರ ಗರಿಷ್ಠ 200 ಏಕರೂಪ ದರ ನಿಗದಿಪಡಿಸಿತ್ತು. ಜನಸಾಮಾನ್ಯರು ಮುಕ್ತವಾಗಿ ಸ್ವಾಗತಿಸಿದ್ದರು.
ಆದರೆ, ಚಿತ್ರ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಫ್, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್ ಲಿಮಿಟೆಡ್ನ ಷೇರುದಾರ ಶಂತನು ಪೈ, ಕೀಸ್ಟೋನ್ ಎಂಟರ್ಟೈನ್ಮೆಂಟ್ ಹಾಗೂ ವಿ.ಕೆ.ಫಿಲ್ಡ್ ಅವರು 200 ಏಕರೂಪ ದರ ನಿಗದಿಪಡಿಸಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ತಡೆ ನೀಡಬೇಕೆಂದು ಕೋರಿ ರಿಟ್ ಅರ್ಜಿಗಳನ್ನು ಸಲ್ಲಿಸಿದ್ದರು.
ಅರ್ಜಿದಾರರು ಹಾಗೂ ಸರ್ಕಾರದ ಪರ ವಕೀಲರ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಪೀಠ ತಡೆ ನೀಡಿ ವಿಚಾರಣೆಯನ್ನು ಮುಂದೂಡಿದೆ.