- ಮಂಡ್ಯ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಚಾಲನೆ
- ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆ ಹಣ್ಣು, ಶೇಂಗಾ ಚಿಕ್ಕಿ ವಿತರಣೆ
ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ಹಾಗೂ ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಮಂಡ್ಯ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಚಾಲನೆ ನೀಡಿದರು.
ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಶಾಲೆಗಳ 1ರಿಂದ 10 ನೇ ತರಗತಿಯ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ವಾರದಲ್ಲಿ ಎರಡು ದಿನ ಮೊಟ್ಟೆ ಹಾಗೂ ಮೊಟ್ಟೆ ತಿನ್ನದವರಿಗೆ ಬಾಳೆ ಹಣ್ಣು, ಶೇಂಗಾ ಚಿಕ್ಕಿ ವಿತರಿಸುವ ಯೋಜನೆ ಇದಾಗಿದೆ.
“ಗ್ರಾಮೀಣ ಮತ್ತು ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ದೃಷ್ಟಿಯಿಂದ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ. ಇದಲ್ಲದೆ ಆರ್ಥಿಕವಾಗಿ ಹಿಂದುಳಿದವರು, ಮಹಿಳೆಯರು ಹಾಗೂ ರೈತರಿಗೆ ಪೂರಕವಾದ ಯೋಜನೆಗಳನ್ನೂ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಇದಕ್ಕೆ ಸಾರ್ವಜನಿಕರ ಮುಂದೆ ಇರುವ ಗೃಹಜ್ಯೋತಿ, ಶಕ್ತಿ, ಗೃಹ ಲಕ್ಷ್ಮಿ ಹಾಗೂ ಅನ್ನ ಭಾಗ್ಯ ಯೋಜನೆಗಳು ಉದಾಹರಣೆಯಾಗಿವೆ” ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಈ ಸುದ್ದಿ ಓದಿದ್ದೀರಾ? ಎನ್‌ಇಪಿಯಿಂದ ಕನ್ನಡವನ್ನೇ ಮರೆತುಬಿಡುವ ಅಪಾಯ: ಸಚಿವ ಮಧು ಬಂಗಾರಪ್ಪ
“ಈ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವಾಗಿರುವುದರಿಂದ ಮುಂದಿನ ದಿನಗಳಲ್ಲಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಸಿರಿಧಾನ್ಯದ ತಿನಿಸುಗಳನ್ನೂ ಸೇರ್ಪಡೆಗೊಳಿಸಬೇಕು. ಇದರಿಂದ ರೈತರಿಗೂ ಪ್ರೋತ್ಸಾಹ ಸಿಗಲಿದೆ. ಮಕ್ಕಳು ಶಕ್ತಿವಂತರಾಗುತ್ತಾರೆ” ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.
“ಕೃಷಿ ಇಲಾಖೆಯಲ್ಲೂ ರೈತರಿಗೆ ಪೂರಕವಾಗಿ ಕೃಷಿ ಭಾಗ್ಯ ಸೇರಿದಂತೆ ಇನ್ನಿತರ ಯೋಜನೆಗಳನ್ನು ರೂಪಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮೈ ಶುಗರ್ ಕಾರ್ಖಾನೆಯನ್ನು ಅಭಿವೃದ್ಧಿ ಪಡಿಸಲಾಗುವುದು. ಮಂಡ್ಯ ಜಿಲ್ಲೆಯಲ್ಲಿ ಕಾಮಗಾರಿಗಳ ಹಣ ಪಾವತಿಗಾಗಿ ಲೋಕೋಪಯೋಗಿ ಇಲಾಖೆಗೆ ರೂ. 10 ಕೋಟಿ, ಜಿಲ್ಲಾ ಪಂಚಾಯತ್‌ಗೆ 10 ರಿಂದ 15 ಕೋಟಿ ರೂ. ಬಿಡುಗಡೆ ಮಾಡಲಾಗಿದೆ” ಎಂದು ಚಲುವರಾಯಸ್ವಾಮಿ ಮಾಹಿತಿ ನೀಡಿದರು.