ಹಾಸನ ಜಿಲ್ಲೆಯ ಸಂತೆಶಿವರ ಗ್ರಾಮದಲ್ಲಿ ಸುಮಾರು ₹5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಬೇಕಾಗಿದ್ದ ಡಾ. ಎಸ್ ಎಲ್ ಭೈರಪ್ಪ ಕಲೆ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರದ ಕಟ್ಟಡ ಕಾಮಗಾರಿ ಕಳೆದ ಆರು ತಿಂಗಳಿನಿಂದ ಸ್ಥಗಿತಗೊಂಡಿದ್ದು, ಕೂಡಲೇ ಸಂಬಂಧಪಟ್ಟವರು ಕ್ರಮಕೈಗೊಂಡು ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಈ ಯೋಜನೆಗೆ ಅನುಮೋದನೆ ನೀಡಲಾಗಿತ್ತು. ನಂತರ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ವೇಳೆ ₹1 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಆ ಮೊತ್ತದಲ್ಲಿ ಭಾಗಶಃ ಕಾಮಗಾರಿ ಮುಂದುವರಿಸಲಾಯಿತು. ಆದರೆ ಉಳಿದ ₹4 ಕೋಟಿ ರೂಪಾಯಿ ಬಿಡುಗಡೆಯಾಗದ ಕಾರಣದಿಂದ ಕಾಮಗಾರಿ ಮಧ್ಯದಲ್ಲೇ ನಿಂತುಹೋಗಿದೆ.

ಕಟ್ಟಡ ನಿರ್ಮಾಣ ಪೂರ್ಣಗೊಂಡಿದ್ದರೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿ ಇದು ಮಹತ್ವದ ಪಾತ್ರವಹಿಸುತ್ತಿತ್ತು ಎಂದು ಗ್ರಾಮಸ್ಥರು ಹೇಳಿದ್ದಾರೆ. ಸರ್ಕಾರದ ನಿರ್ಲಕ್ಷ್ಯದಿಂದ ಯೋಜನೆ ಸ್ಥಗಿತಗೊಂಡಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದು, ತಕ್ಷಣ ಉಳಿದ ಹಣವನ್ನು ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಹಾಸನ | ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಂ ಶಿವಣ್ಣ ನಿಧನ


ಈ ಕೇಂದ್ರ ಪೂರ್ಣಗೊಂಡರೆ ಜಿಲ್ಲೆಯ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ವಲಯಕ್ಕೆ ಹೊಸ ಉತ್ಸಾಹ ಸಿಗಲಿದೆ. ಸರ್ಕಾರವು ತಕ್ಷಣ ಕ್ರಮ ಕೈಗೊಂಡು ಕಾಮಗಾರಿ ಪುನರಾರಂಭಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.