ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಸೋಯಾಬಿನ್ ಮತ್ತು ಶೇಂಗಾ ಖರೀದಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶೀಘ್ರವೇ ಖರೀದಿ ಕೇಂದ್ರಗಳನ್ನು ತೆರೆದು, ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಲಾಗುತ್ತದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಸೋಯಾಬಿನ್ ಮತ್ತು ಶೇಂಗಾ ಖರೀದಿ ಕುರಿತು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಗಳಿಗೆ ಸುತ್ತೋಲೆ ನೀಡಿರುವ ಸಚಿವ ಪಾಟೀಲ್, “ಕ್ವಿಂಟಾಲ್ ಸೋಯಾಬಿನ್‍ಗೆ 5,328 ರೂ. ಹಾಗೂ ಶೇಂಗಾಗೆ 7,623 ರೂ. ಬೆಂಬಲ ಬೆಲೆ ನಿಗದಿ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.
“ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ, ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸೋಯಾಬಿನ್ ಬೆಳೆಗಳನ್ನು ಹೆಚ್ಚಾಗಿ ಬೆಳೆಯಾಗುತ್ತದೆ. ಅಂತೆಯೇ, ಕೊಪ್ಪಳ, ಧಾರವಾಡ, ಹಾವೇರಿ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಗದಗ, ಬಾಗಲಕೋಟೆ, ದಾವಣಗೆರೆ, ರಾಯಚೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಶೇಂಗಾವನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಈ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತದೆ” ಎಂದು ಹೇಳಿದ್ದಾರೆ.
ಈ ಲೇಖನ ಓದಿದ್ದೀರಾ?: ಮಹಿಳೆಯರ ಮೇಲೆ ಹೆಚ್ಚಿದ ದೌರ್ಜನ್ಯ, ದೇವತೆ ಸ್ಥಾನ ನೀಡುವ ದೇಶ ಭಾರತ ಎನ್ನುವುದು ಬರೀ ಭ್ರಮೆ!
“ಸೋಯಾಬಿನ್ ಮತ್ತು ಶೇಂಗಾ ಖರೀದಿಗೆ ನಾಫೆಡ್, ಎನ್‍ಸಿಸಿಎಫ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳವನ್ನು ಖರೀದಿ ಏಜನ್ಸಿಗಳಾಗಿ ನೇಮಕ ಮಾಡಲಾಗಿದೆ. ರೈತರು ತಮ್ಮ ಉತ್ಪನ್ನಗಳ ಮಾರಾಟಕ್ಕಾಗಿ ನೋಂದಣಿ ಮಾಡಲು 80 ದಿನಗಳು ಹಾಗೂ ಖರೀದಿ ಮಾಡಲು 90 ದಿನಗಳನ್ನು ನಿಗದಿಪಡಿಸಲಾಗಿದೆ” ಎಂದು ತಿಳಿಸಿದ್ದಾರೆ.
“ಅಗತ್ಯಕ್ಕೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು, ಖರೀದಿ ಕೇಂದ್ರಗಳಲ್ಲಿ ಲೋಪಗಳಾಗದಂತೆ ಎಚ್ಚರಿಕೆ ವಹಿಸಬೇಕು. ಮಾರ್ಗಸೂಚಿಗಳಿಗೆ ಅನುಗುಣವಾಗಿ ಖರೀದಿ ಮಾಡಲಾಗುತ್ತಿದೆಯೇ ಎಂಬುರದ ಕುರಿತು ಮೇಲ್ವಿಚಾರಣೆ ಮಾಡಬೇಕು” ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.