ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ರ ಗಣತಿ ಕಾರ್ಯದಲ್ಲಿ ತೊಡಗಿರುವ ಶಿಕ್ಷಕರಿಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಗಲಾಟೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ತುಮಕೂರು ಜಿಲ್ಲಾಧಿಕಾರಿಗೆ ಮನವಿ ಪತ್ರನೀಡಿದೆ.
ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಾಯಿದ್ ಅಫ್ರಿದಿ ಅವರ ನಿಯೋಗ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರನ್ನು ಭೇಟಿಯಾಗಿ ಕಾನೂನು ಕ್ರಮಕ್ಕೆ ಮನವಿ ಮಾಡಲಾಗಿದೆ.
ಅ.2 ರಂದು ತುಮಕೂರು ಹೊರವಲಯದ ವಾರ್ಡ್ ನಂಬರ್ 6 ರ ಭೀಮಸಂದ್ರಪಾಳ್ಯದಲ್ಲಿ ಸಮೀಕ್ಷೆ ಮಾಡುತ್ತಿರುವ ಸಮಯದಲ್ಲಿ ಮಾಹಿತಿ ಕೇಳಿದ ಶಿಕ್ಷಕರಿಗೆ “ಧರ್ಮ ನಿಂದನೆ” ಮಾಡಿದಲ್ಲದೆ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿ, ಗಲಾಟೆ ಮಾಡಿ ಸಮೀಕ್ಷೆಗೆ ಅಡ್ಡಿಮಾಡಲಾಗಿದೆ. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಯಿಂದ ಸಮೀಕ್ಷೆ ಮೇಲು ಪರಿಣಾಮ ಬೀರಲಿದೆ ಹಾಗಾಗಿ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಸೂಕ್ತ ಕಾನೂನು ಕ್ರಮ ಕೈಗೊಂಡು, ಗಣತಿಯಲ್ಲಿ ತೊಡಗಿರುವ ಶಿಕ್ಷಕರಿಗೆ ಹಾಗೂ ವಿಶೇಷವಾಗಿ ‘ಮಹಿಳಾ ಶಿಕ್ಷಕಿಯರಿಗೆ ಸೂಕ್ತ ರಕ್ಷಣೆಯನ್ನು” ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ.