ಕೆಲಸದಲ್ಲಿ ನಿರ್ಲಕ್ಷ್ಯ ತೋರಿದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಕೆಲಸ ಮಾಡಿ, ಇಲ್ಲವೇ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಧಾರವಾಡ ಜಿಲ್ಲಾಧಿಕಾರಿಗಳ ನೂತನ ಸಭಾ ಭವನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬೆಳಗಾವಿ ಕಂದಾಯ ವಿಭಾಗದ ವ್ಯಾಪ್ತಿಗೆ ಬರುವ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
“ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಕಾರ್ಯ ನಿರ್ವಹಿಸಬೇಕು ಹಾಗೂ ವಾಸ್ತವಿಕ ಸಂಗತಿಗಳ ಆಧಾರದ ಮೇಲೆ ಕಾರ್ಯ ನಿರ್ವಹಿಸಬೇಕು. ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದಂತೆ ಎಲ್ಲ ರೀತಿಯ ಎಚ್ಚರಿಕೆ ವಹಿಸಬೇಕು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
“ಗಂಗಾ ಕಲ್ಯಾಣ ಯೋಜನೆ ಅತ್ಯಂತ ಮುಖ್ಯವಾದದ್ದು, ಅದನ್ನು ಜಾರಿಗೆ ತರುವ ಕೆಲಸಕ್ಕೆ ಆದ್ಯತೆ ನೀಡಬೇಕು. ಇನ್ನು ಮುಂದೆ ಪ್ರತಿ ಮೂರು ತಿಂಗಳಿಗೊಮ್ಮೆ ವಿಭಾಗೀಯ ಮಟ್ಟದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುವುದು” ಎಂದು ತಿಳಿಸಿದರು.