- ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್: ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ನೀರಜ್ ಚೋಪ್ರಾ
- ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದ ಪಾಕ್ನ ಅರ್ಷದ್ ನದೀಮ್
ಹಂಗೇರಿಯ ಬುಡಾಪೆಸ್ಟ್ನಲ್ಲಿ ಭಾನುವಾರ ನಡೆದ 2023ನೇ ಸಾಲಿನ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಅವರು 88.17 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದಾರೆ. ಒಲಿಂಪಿಕ್ಸ್ ಬಳಿಕ ವಿಶ್ವ ಅಥ್ಲೆಟಿಕ್ಸ್ ಕೂಟದಲ್ಲೂ ಭಾರತಕ್ಕೆ ಕಾಡುತ್ತಿದ್ದ ಚಿನ್ನದ ಕೊರತೆಯನ್ನು ನೀರಜ್ ಚೋಪ್ರಾ ನೀಗಿಸಿದ್ದಾರೆ.
ಮೊದಲ ಸುತ್ತಿನಲ್ಲೇ ನಿಗದಿತ ಗೆರೆ ತಾಗಿದ್ದರಿಂದ ‘ಫೌಲ್’ ಮಾಡಿದ್ದ ನೀರಜ್ ಚೋಪ್ರಾ, 2ನೇ ಸುತ್ತಿನಲ್ಲಿ 88.17 ಮೀಟರ್ ದೂರಕ್ಕೆ ಎಸೆಯುವ ಮೂಲಕ ಅಗ್ರಸ್ಥಾನದೊಂದಿಗೆ ಚಿನ್ನದ ಪದಕ ಗಳಿಸುವಲ್ಲಿ ಯಶಸ್ವಿಯಾದರು. ಆ ಮೂಲಕ 40 ವರ್ಷದಿಂದ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ಕೂಟದಲ್ಲಿ ಮೊದಲ ಬಾರಿಗೆ ಚಿನ್ನದ ಪದಕ ಗಳಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ನೀರಜ್ ಚೋಪ್ರಾ ಸಾಧನೆಗೆ ದೇಶಾದ್ಯಂತ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ಪಾಕಿಸ್ತಾನದ ಅರ್ಷದ್ ನದೀಮ್ ಅವರು 87.82 ಮೀಟರ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದರೆ, ಚೆಕ್ ಗಣರಾಜ್ಯದ ಜಾಕುಬ್ ವೆಡ್ಲೆಜ್ 86.67 ಮೀ. ದೂರ ಎಸೆದು ಕಂಚಿನ ಪದಕ ತಮ್ಮದಾಗಿಸಿಕೊಂಡರು.
ಶುಕ್ರವಾರ ನಡೆದಿದ್ದ ಜಾವೆಲಿನ್ ಥ್ರೋ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಅವರು ಮೊದಲ ಪ್ರತಯತ್ನದಲ್ಲೇ 88.77 ಮೀಟರ್ ಎಸೆಯುವ ಮೂಲಕ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ತಮ್ಮ ಅಭಿಯಾನ ಆರಂಭಿಸಿದ್ದರು. ಅಲ್ಲದೇ, 2024ರಲ್ಲಿ ಪ್ಯಾರಿಸ್ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕೂಟಕ್ಕೂ ಅರ್ಹತೆ ಪಡೆದಿದ್ದರು.