- ‘ವಿಧಾನಸೌಧದ ಮೂಲೆ ಮೂಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ’
- ‘ಬರಗಾಲಕ್ಕೆ ರೈತ ಸಿಕ್ಕರೂ ಕೂಡ ಸರ್ಕಾರ ಆ ಕಡೆ ತಿರುಗಿ ನೋಡಿಲ್ಲ’
ಸಂಪೂರ್ಣ ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲ ಕಾಮಗಾರಿಗಳು ಸಂಪೂರ್ಣ ನಿಂತು ಹೋಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ಸರ್ಕಾರ ನೂರು ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟ್ಟರ್ನಲ್ಲಿ ಪ್ರತಿಕ್ರಿಯಿಸಿ, “ಕಾಂಗ್ರೆಸ್ ಸರ್ಕಾರ ವರ್ಗಾವಣೆಯನ್ನು ಒಂದು ಕಮಿಷನ್ ದಂಧೆಯಾಗಿ ಮಾಡಿ, ವಿಧಾನಸೌಧದ ಮೂಲೆ ಮೂಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗುತ್ತಿಗೆದಾರರ ಬಿಲ್ ಬಾಕಿ ಇಟ್ಟುಕೊಂಡು ಕಮಿಷನ್ ದಂಧೆಗೆ ಮುಂದಾಗಿದೆ” ಎಂದು ದೂರಿದರು.
“ರೈತರು ಬರಗಾಲದ ಬವಣೆಯಲ್ಲಿ ಸಿಕ್ಕರೂ ಕೂಡ ಸರ್ಕಾರ ಆ ಕಡೆ ತಿರುಗಿ ನೋಡಿಲ್ಲ. ರೈತರ ಆತ್ಮಹತ್ಯೆ ಮತ್ತೆ ಪ್ರಾರಂಭವಾಗಿದೆ. ಕೃಷಿ ಉತ್ಪಾದನೆಗೆ ಪೆಟ್ಟು ಬೀಳುವ ಎಲ್ಲ ಲಕ್ಷಣ ಕಾಣುತ್ತಿದೆ. ಪೂರ್ಣ ಪ್ರಮಾಣದ ಗ್ಯಾರಂಟಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದೆ” ಎಂದು ಹರಿಹಾಯ್ದಿದ್ದಾರೆ.
“ಒಂದು ಕಡೆ ವಿದ್ಯುತ್ ದರ ಹೆಚ್ಚಿಸಿ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಸಾರಿಗೆ ಸಿಬ್ಬಂದಿಗೆ ಸಮರ್ಪಕವಾದ ಸಂಬಳ ನೀಡಿಲ್ಲ. 10 ಕೆಜಿ ಅಕ್ಕಿ ಗ್ಯಾರಂಟಿಯನ್ನು ಈಡೇರಿಸಲಾಗಿಲ್ಲ. ಕೇಂದ್ರದ ಐದು ಕೆಜಿ ಅಕ್ಕಿಯೇ ಜನರ ಸಹಾಯಕ್ಕೆ ಬಂದಿದೆ. ರಾಜ್ಯದಲ್ಲಿ ಗೃಹಲಕ್ಷ್ಮೀಯರ ಹುಡುಕಾಟ ಪೂರ್ಣಗೊಂಡಿಲ್ಲ” ಎಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಯಾರು ಬರುತ್ತಾರೋ ಬರಲಿ: ಮುಕ್ತ ಆಹ್ವಾನ ನೀಡಿದ ಸಿಎಂ ಸಿದ್ದರಾಮಯ್ಯ
“ಈ ಮಧ್ಯ ಗ್ಯಾರಂಟಿಗಾಗಿ ಎಸ್ಸಿ ಎಸ್ಟಿ ಅಭಿವೃದ್ಧಿ ಹಣ 11 ಸಾವಿರ ಕೋಟಿ ರೂಪಾಯಿ ಬಳಕೆ ಮಾಡಿ ಎಸ್ಸಿ ಎಸ್ಟಿ ಮತ್ತು ಒಬಿಸಿ ಜನರಿಗೆ ಸರ್ಕಾರ ಮೋಸ ಮಾಡಿದೆ. ಕಾವೇರಿ ಜಲಾನಯನ ಪ್ರದೇಶದ ರೈತರ ಮತ್ತು ಸಾರ್ವಜನಿಕರ ಹಿತ ಕಾಯಲು ವಿಫಲವಾಗಿದೆ. ನಮ್ಮ ಡ್ಯಾಮುಗಳ ಕೀಲಿಕೈಯನ್ನು ತಮಿಳುನಾಡಿಗೆ ಒಪ್ಪಿಸಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಪೈಪೋಟಿ ಆಡಳಿತದ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರಿದೆ. ಇದರಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಕೊಲೆ ಸುಲಿಗೆ ಸಾಮಾನ್ಯವಾಗಿದೆ” ಎಂದು ಆರೋಪಿಸಿದರು.
“ಕಾಂಗ್ರೆಸ್ ಸರ್ಕಾರ ನೂರು ದಿನಗಳಲ್ಲಿ ಜನರ ವಿಶ್ವಾಸ ಗಳಿಸುವುದು ದೂರದ ಮಾತು ಅವರ ಶಾಸಕರ ವಿಶ್ವಾಸವನ್ನೇ ಕಳೆದುಕೊಂಡಿದೆ. ಎಲ್ಲ ರಂಗದಲ್ಲಿ ವೈಫಲ್ಯವೇ ಇವರ ಸಾಧನೆ. ಸರ್ಕಾರದ ವಿರುದ್ಧ ಜನ ಸಾಮಾನ್ಯರು, ಮಾಧ್ಯಮದವರು, ಸಂಘ ಸಂಸ್ಥೆಗಳು ಧ್ವನಿ ಎತ್ತುವುದನ್ನು ಪೊಲೀಸ್ ಇಲಾಖೆ ಮೂಲಕ ಹತ್ತಿಕ್ಕುವ ಪ್ರಯತ್ನ. ಇದು ಪ್ರಜಾಪ್ರಭುತ್ವ ವಿರೊಧಿ, ಸಂವಿಧಾನ ವಿರೋಧಿ ಹಾಗೂ ಸರ್ವಾಧಿಕಾರಿ ಆಡಳಿತವೆಂದು ನೂರು ದಿನಗಳಲ್ಲಿ ತೋರಿಸಿಕೊಟ್ಟಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.