ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣಾ ಕಾರ್ಯದ ಹಿನ್ನೆಲೆಯಲ್ಲಿ ಅಕ್ಕಿ ವಿತರಣೆ ವಿಳಂಬವಾಗಿತ್ತು. ರಾಜ್ಯದಲ್ಲಿರುವ ಒಟ್ಟು 1.28 ಕೋಟಿಯಷ್ಟು ಕಾರ್ಡ್‌ಗಳ ಪೈಕಿ 1.7 ರಿಂದ 1.10 ಕೋಟಿ ಕಾರ್ಡ್‌ಗಳಿಗೆ ಐದು ಕೆಜಿ ಅಕ್ಕಿಯ ಹಣ ಪಾವತಿಸಲಾಗಿದೆ. ಇನ್ನು ಕೆಲ ದಿನಗಳಲ್ಲಿ ಆಗಸ್ಟ್ ತಿಂಗಳ ಎಲ್ಲ ಹಣ ಪಾವತಿಸಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.
ದಾವಣಗೆರೆ ಭೇಟಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. “ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿತ ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕನೇ ಯೋಜನೆ ಗೃಹಲಕ್ಷ್ಮೀ ಯೋಜನೆಗೆ ಆ.30 ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗುವುದು. ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತರ ಅನೇಕ ಮುಖಂಡರು ಭಾಗವಸಲಿದ್ದಾರೆ. ಡಿಸೆಂಬರ್‌ನಲ್ಲಿ ಯುವನಿಧಿ ಯೋಜನೆಯನ್ನೂ ಪ್ರಾರಂಭ ಮಾಡಲಾಗುವುದು” ಎಂದು ತಿಳಿಸಿದರು.
ಮಾಜಿ ಸಚಿವ ಎಚ್. ಆಂಜನೇಯ ಮಾತನಾಡಿ, “ಬಡವರ ಕಣ್ಣೀರು ಒರೆಸುವಂತಹ ಹೃದಯವಂತಿಕೆ ಕೆಲಸ ವನ್ನು ಕಾಂಗ್ರೆಸ್ ಮಾಡುತ್ತಿದೆ. ಬುಧವಾರ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮದ ನೇರಪ್ರಸಾರದ ವ್ಯವಸ್ತೆ ಮಾಡಲಾಗಿದೆ. ಎಲ್ಲ ಫಲಾನುಭವಿಗಳು ಯೋಜನೆಯ ಅನುಕೂಲ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.ಪ್ರಧಾನಿ ನರೇಂದ್ರಮೋದಿಯವರು ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಬೆಲೆ ಏರಿಕೆ ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ ಎಂದು ವಿಪರೀತ ಟೀಕೆ ಮಾಡಿದ್ದಾರೆ. ಬೆಲೆ ಏರಿಕೆ ನಿಯಂತ್ರಣಕ್ಕೆ ಬಿಜೆಪಿಯಿಂದ ಮಾತ್ರವೇ ಸಾಧ್ಯ ಎಂದು ಜನರಿಗೆ ವಂಚಿಸಿ ಅಧಿಕಾರಕ್ಕೆ ಬಂದಿರುವ ಅವರು ಬೆಲೆ ಏರಿಕೆ ನಿಯಂತ್ರಣ ಮಾಡುವಲ್ಲಿ ವಿಫಲರಾಗಿದ್ದಾರೆ. ನಮ್ಮ ಸರ್ಕಾರದಲ್ಲಿನ ಬೆಲೆಗಳಿಗೂ, ಈಗಿರುವ ಬೆಲೆಗಳ ನೋಡಿದರೆ ಅದು ಗೊತ್ತಾಗುತ್ತದೆ” ಎಂದು ದೂರಿದರು.