ಎರಡು ದಿನಗಳ ಹಿಂದೆ ರೈತ ಹೋರಾಟಗಾರ ಯಲ್ಲಪ್ಪ ಹೆಗಡೆ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಇದು ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕ ಭದ್ರತೆಗಳಿಗೆ ಭಂಗ ತರುವಂತಹ ಘಟನೆಗೆ ಸಾಕ್ಷಿಯಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಮುಖಂಡ ಬಸವರಾಜ್ ಧರ್ಮಂತಿ ಹೇಳಿದರು.
ರೈತ ಮುಖಂಡ, ಹೋರಾಟಗಾರ ಯಲ್ಲಪ್ಪ ಹೆಗಡೆ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದವರು ಮತ್ತು ಹಲ್ಲೆಗೆ ಕುಮ್ಮಕ್ಕು ನೀಡಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಬಾಗಲಕೋಟೆಯಲ್ಲಿ ಪತ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪೂರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಬಸವರಾಜ್ ಧರ್ಮಂತಿ, “ಯಲ್ಲಪ್ಪ ಹೆಗಡೆ ರವರು ಜಿಲ್ಲೆಯ ಯಾವುದೇ ಭಾಗದಲ್ಲಿ ಅನ್ಯಾಯ, ಅಕ್ರಮ ನಡೆದರೆ ನಿರ್ಭಯವಾಗಿ ಪ್ರತಿಭಟಿಸುತ್ತ ಬಂದಿದ್ದಾರೆ. ಅವರು ಮಾಜಿ ಸಚಿವ ಮುರುಗೇಶ್ ನಿರಾಣಿ ರವರ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದರು. ಹೋರಾಟವನ್ನು ಹತ್ತಿಕ್ಕುವ ದುರುದ್ದೇಶದಿಂದ ಯಲ್ಲಪ್ಪ ಹೆಗಡೆ ಹಾಗೂ ಸಂಗಡಿಗರ ಮೇಲೆ ದುಷ್ಕರ್ಮಿಗಳು ಮುಖಗವಸು ಧರಿಸಿಕೊಂಡು ಮಾರಣಾಂತಿಕವಾಗಿ ಹಲ್ಲೆ ಮಾಡಿ, ಪರಾರಿಯಾಗಿದ್ದಾರೆ. ಆರೋಪಿಗಳನ್ನು ಬಂಧಿಸಬೇಕು” ಎಂದು ಒತ್ತಾಯಿಸಿದರು.