ಮುಂಗಾರು ಸಂಪೂರ್ಣ ಕೈಕೊಟ್ಟಿದ್ದು, ಅಲ್ಪ ಸ್ವಲ್ಪ ಮಳೆಗೆ ರೈತರು ಬಿತ್ತನೆ ಮಾಡಿದ್ದ ಬೆಳೆ ಕೈಗೆ ಬರದಂತಾಗಿದೆ. ಈ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರೈತ ಸಂಘದ ಕಾರ್ಯಕರ್ತರು ಜಿಲ್ಲೆಯ ಹೂವಿನಹಡಗಲಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಜಿಲ್ಲಾ ಮುಖಂಡ ಗಂಟಿ ಸೋಮಶೇಖರ್ ಮಾತನಾಡಿ, “ಇಡೀ ರಾಜ್ಯಾದ್ಯಂತ ಮುಂಗಾರು ಸಂಪೂರ್ಣ ಕೈಕೊಟ್ಟಿದ್ದು, ಬರಗಾಲ ಉಂಟಾಗಿದೆ. ಸರ್ಕಾರ ಕೂಡಲೇ ರೈತರ ನೆರವಿಗೆ ಬರಬೇಕು. ರೈತರ ಸಂಪೂರ್ಣ ಸಾಲವನ್ನು ಮನ್ನ ಮಾಡಿ, ಹೊಸ ಸಾಲ ನೀಡಬೇಕು” ಎಂದು ಒತ್ತಾಯಿಸಿದರು.
“ಸರ್ಕಾರಿ ಸಹಕಾರಿ ಬ್ಯಾಂಕಿನಲ್ಲಿ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷದವರೆಗೆ ಸಾಲ ಕೊಡುತ್ತೇವೆಂದು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದೀರಿ. ಆದರೆ, ಇಡೀ ರಾಜ್ಯಾದ್ಯಂತ ಸಹಕಾರಿ ಬ್ಯಾಂಕ್‌ಗಳಲ್ಲಿ 5 ಲಕ್ಷದವರೆಗೆ ಸಾಲ ನೀಡುತ್ತಿಲ್ಲ. ಇದು ಕೇವಲ ವಿಧಾನಸೌದದಲ್ಲಿ ಕಡತಕ್ಕೆ ಮಾತ್ರ ಸೀಮಿತವಾಗಿದೆ. ಸರ್ಕಾರ ರೈತರಿಗೆ ಸರಿಯಾಗಿ ನಡೆದುಕೊಳ್ಳುತ್ತಿಲ್ಲ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ರೈತ ಸಂಘ ಆಗ್ರಹ
“ಸರ್ಕಾರದ ಧೋರಣೆಯನ್ನು ಖಂಡಿಸಿ ಸೆಪ್ಟಂಬರ್ 5ರಂದು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕಚೇರಿಗಳ ಮುಂದೆ ಧರಣಿ ಸತ್ಯಾಗ್ರಹ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.
ರಾಜ್ಯ ರೈತ ಸಂಘ ಮಹಿಳಾ ಜಿಲ್ಲಾಧ್ಯಕ್ಷೆ ಯಶೋಧಾ ಎಸ್, ಹುಲಿಗೆಮ್ಮ, ಶಿಲ್ಪಾ, ಸವಿತಾ, ಆಂಜನಪ್ಪ ಸೇರಿದಂತೆ ಇತರರು ಹಾಜರಿದ್ದರು .