2019ರ ಲೋಕಸಭಾ ಚುನಾವಣೆ ವಳೆ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಸಂಸತ್ ಸದಸ್ಯತ್ವವನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ನಡುವೆ ಅವರು ಆರು ವರ್ಷಗಳ ಕಾಲ ಚುನಾವಣೆಗೆ ನಿಲ್ಲುವಂತಿಲ್ಲ ಎಂದೂ ಕೋರ್ಟ್ ಆದೇಶಿಸಿದೆ ಎಂಬ ವದಂತಿಯೂ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಜ್ವಲ್ ರೇವಣ್ಣ, “ಆರು ವರ್ಷ ಚುನಾವಣೆಗೆ ಸ್ಪರ್ಧಿಸಬಾರದೆಂದು ಕೋರ್ಟ್ ಎಲ್ಲಿ ಆದೇಶಿಸಿದೆ. ಸದಸ್ಯತ್ವವನ್ನು ಅಸಿಂಧುಗೊಳಿಸಲಾಗಿದೆ ಅಷ್ಟೇ” ಎಂದು ಹೇಳಿದ್ದಾರೆ.
“ಹಲವು ವಿಚಾರಗಳ ಅಡಿಯಲ್ಲಿ ನನ್ನ ವಿರುದ್ಧ ದೂರು ದಾಖಲಾಗಿವೆ. ಕಳೆದ ಒಂದೂವರೆ ವರ್ಷಗಳಿಂದ ಕೋರ್ಟ್‌ಗೆ ಹಾಜರಾಗುತ್ತಲೇ ಇದ್ದೇನೆ. ಯಾವ ವಿಚಾರದಲ್ಲಿ ತೀರ್ಪು ಬಂದಿದೆ ಎಂಬುದನ್ನು ಅರಿತುಕೊಳ್ಳಬೇಕು. ವಕೀಲರೊಂದಿಗೆ ಚರ್ಚಿಸಿ, ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಕಾನೂನು ಹೋರಾಟ ಮಾಡಲು ಯೋಜಿಸಿದ್ದೇನೆ” ಎಂದು ಹೇಳಿದ್ದಾರೆ.
“ಮುಂದಿನ 6 ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂದು ಆದೇಶದಲ್ಲಿ ಹೇಳಲಾಗಿಲ್ಲ. ಸದಸ್ಯತ್ವವನ್ನಷ್ಟೇ ಅಸಿಂಧುಗೊಳಿಸಲಾಗಿದೆ” ಎಂದು ಅವರು ವಿವರಿಸಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಅವರ ಸಂಸತ್ ಸದಸ್ಯತ್ವವನ್ನು ಅಸಿಂಧುಗೊಳಿಸಬೇಕು ಎಂದು ಆಗ ಬಿಜೆಪಿಯಲ್ಲಿದ್ದ ಎ ಮಂಜು (ಈಗ ಜೆಡಿಎಸ್ ಶಾಸಕ) ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರಜ್ವಲ್ ರೇವಣ್ಣ ಸದಸ್ಯತ್ವವನ್ನು ಅಸಿಂಧುಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.