ಶಾಲಾ ಕಟ್ಟಡ ನಿರ್ಮಾಣಕ್ಕೆ ಭೂಮಿ ಕಲ್ಪಿಸಬೇಕೆಂದು ಒತ್ತಾಯಿಸಿ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಊಟಿ ಗ್ರಾಮದ ಶಾಲಾ ವಿದ್ಯಾರ್ಥಿಗಳು ಊಟಿ ಚಿನ್ನದ ಗಣಿ ಎದುರು ಪ್ರತಿಭಟನೆ ನಡೆಸಿದರು.
“ಕಳೆದ ಅನೇಕ ವರ್ಷಗಳಿಂದಲೂ ಶಾಲಾ ಕಟ್ಟಡ ನಿರ್ಮಾಣಕ್ಕೆ ಭೂಮಿಯ ಸಮಸ್ಯೆ ಇದ್ದು, ಈ ಬಗ್ಗೆ ಸಂಬಂಧಿಸಿದ ಎಲ್ಲ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ” ಎಂದು ಆಗ್ರಹಿಸಿದರು.
“ಗ್ರಾಮದಲ್ಲಿ 1ರಿಂದ 8ನೇ ತರಗತಿವರೆಗೆ ಇರುವ ಶಾಲೆಯಲ್ಲಿ 402 ಮಂದಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಂಜೂರಾತಿ ಹುದ್ದೆಗಳು 11 ಆದರೆ, ಸದ್ಯ ನಾಲ್ಕು ಮಂದಿ ಶಿಕ್ಷಕರು ಮಾತ್ರ ಇದ್ದಾರೆ. ಶಾಲೆ ಊಟಿ-ಪಲಕನಮರಡಿ ಗ್ರಾಮಕ್ಕೆ ಸಂಪರ್ಕಿಸುವ ಮುಖ್ಯ ರಸ್ತೆಗೆ ಹೊಂದಿಕೊಂಡಿರುವುದರಿಂದ ಮಕ್ಕಳಿಗೆ ಆಟದ ಮೈದಾನ ಸೇರಿದಂತೆ ಯಾವುದೇ ಅಗತ್ಯ ಸೌಲಭ್ಯ ಇಲ್ಲವಾಗಿರುವುದರಿಂದ ಸಮಸ್ಯೆ ಉಂಟಾಗಿದೆ. ಅಲ್ಲದೆ ಎಲ್ಲ ವಿದ್ಯಾರ್ಥಿಗಳಿಗೆ ಕೇವಲ ಎರಡು ಕೊಠಡಿಗಳಿವೆ. ಇದರಿಂದ ಸಮಸ್ಯೆಯಾಗಿದೆ. ಅಗತ್ಯವಾಗಿರುವ ಶಾಲಾ ಕೊಠಡಿ ನಿರ್ಮಿಸಲು ನಿವೇಶನದ ಅವಶ್ಯಕತೆ ಇದೆ” ಎಂದರು.
ಈ ಸುದ್ದಿ ಓದಿದ್ದೀರಾ? 105 ತಾಲೂಕುಗಳಲ್ಲಿ ಶೀಘ್ರ ಬರ ಘೋಷಣೆ: ಸಿಎಂ ಸಿದ್ದರಾಮಯ್ಯ
ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಸಮಸ್ಯೆಗೆ ಸ್ಪಂದಿಸಿದ್ದು, ಲಿಖಿತ ರೂಪದಲ್ಲಿ ಭರವಸೆ ನೀಡಿದ್ದಾರೆ. ಬಳಿಕ ವಿದ್ಧಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.
ಈ ವೇಳೆ ಹೈದರ್ ಅಲಿ ಪಲಕನಮರಡಿ, ಮೌನೇಶ್, ಶಿವಪ್ಪ, ಪಿಎಸ್ಐ ಸುಜಾತ ನಾಯಕ್ ಸೇರಿದಂತೆ ಬಹುತೇಕ ವಿದ್ಯಾರ್ಥಿ ವಿದ್ಯಾರ್ಥಿನಿಯರು ಇದ್ದರು.