ಬರಗಾಲ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲೆಯಾದ್ಯಂತ ಜಾಥಾ, ಪಾದಯಾತ್ರೆ, ರಸ್ತೆ ತಡೆ ಚಳವಳಿ ನಡೆಸಲಾಗುತ್ತದೆ. ಬಳಿಕ ಸೆಪ್ಟೆಂಬರ್ 11ರಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಶರಣಬಸಪ್ಪ ಮಮಶೆಟ್ಟಿ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ವಿಮೆ ಹಣ ಕಟ್ಟಿದ 1,88,000 ಸಾವಿರ ರೈತರು ಜಿಲ್ಲೆಯಲ್ಲಿದ್ದಾರೆ. ಈ ರೈತರಿಂದ ಹಣ ಜಮಾ ಆಗಿದ್ದು ಒಟ್ಟು 161 ಕೋಟಿ ರೂಪಾಯಿ. ಆದರೆ, ಕೇವಲ 91 ಕೋಟಿ ರೂಪಾಯಿ ಮಾತ್ರ ಬಿಡುಗಡೆಯಾಗಿದೆ. ಇನ್ನೂ ಉಳಿದ ಹಣ ಬಿಡುಗಡೆಯಾಗಿಲ್ಲ. ಅ ಹಣವನ್ನೂ ಕೂಡಲೇ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.
“ದಳ್ಳಾಳಿಗಳ ಮೋಸದಿಂದಾಗಿ ವಿಮೆ ಹಣ ರೈತರ ಖಾತೆಗೆ ಜಮಾ ಆಗದೇ, ಯಾರದ್ದೋ ಖಾತೆಗೆ ಜಮಾ ಆಗಿದೆ. ದಳ್ಳಾರಿಗಳು ರೈತರ ಹಣ ಲೂಟಿ ಮಾಡುತ್ತಿದ್ದಾರೆ. ರೈತರ ಖಾತೆಗೆ ಹಣ ಜಮಾ ಮಾಡುವಲ್ಲಿ ದಳ್ಳಾಳಿಗಳ ಜೊತೆ ಸೇರಿ ಅವ್ಯವಹಾರ ನಡೆಸಿರುವ ಅಧಿಕಾರಿಗಳನ್ನು ಅಮಾನತು ಗೊಳಿಸಬೇಕು. ಕ್ರಿಮಿನಲ್ ಪ್ರಕರಣ ದಾಖಲಿಸಿ, ಬಂಧಿಸಬೇಕು. ವಂಚಿತರಾಗಿರುವ ರೈತರ ಖಾತೆಗೆ ವಿಮೆ ಹಣ ಜಮಾ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.
ರೈತ ಜಾಥಾದ ಹಕ್ಕೊತ್ತಾಯಗಳು
1) ಕಲಬುರ್ಗಿ ಜಿಲ್ಲೆಯನ್ನು ಸಂಪೂರ್ಣ ಬರಗಾಲ ಪಿಡೀತ ಪ್ರದೇಶ ಎಂದು ಘೋಷಿಸಬೇಕು.
2) ಕಲಬುರ್ಗಿ ಜಿಲ್ಲೆಯಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಬೇಕು. ಟ್ಯಾಂಕರ್ ನೀರಿನ ಮಾರಾಟದ ಮೇಲೆ ನಿಯಂತ್ರಣ ಸಾಧಿಸಬೇಕು. ಈಗಾಗಲೆ ಹಳ್ಳಿಗಳಲ್ಲಿ ಕುಡಿಯುವ ನೀರಿನ ಆಹಾಕಾರ ಉಲ್ಬಣಗೊಳ್ಳುತ್ತಿದೆ. ಶುದ್ದವಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು.
3) ತಕ್ಷಣವೇ ಬಿಪಿಎಲ್ – ಎಪಿಎಲ್ ತಾರತಮ್ಯ ಇಲ್ಲದೇ ಬರಗಾಲ ಪರಿಹಾರವಾಗಿ ಪಡಿತರದಲ್ಲಿ ಹೆಚ್ಚುವರಿ ಆಹಾರ ಧಾನ್ಯ ಒದಗಿಸಬೇಕು. ಆಹಾರ ಧಾನ್ಯಗಳ ಬೆಲೆ ಏರಿಕೆ ಮೇಲೆ ಕಡಿವಾಣ ಹಾಕಬೇಕು.
4) ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಕ್ರಮ ವಹಿಸಬೇಕು. ಮೇವು ಕುಂದು ಕೊರತೆ ಪರಿಹರಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು.
5) ಕೂಡಲೇ ಕೇಂದ್ರ ಸರ್ಕಾರವು ಎಲ್ಲ ರೈತರ, ಕೃಷಿ ಕೂಲಿಕಾರರ, ಗ್ರಾಮೀಣ ಮಹಿಳೆಯರ ಸಾಲ ಮನ್ನಾ ಹಾಗೂ ಬಡ್ಡಿ ಮನ್ನಾ ಮಾಡಬೇಕು. ಎಲ್ಲ ರೀತಿಯ ಸಾಲ ವಸೂಲಾತಿಯನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಬೇಕು.
6) ಉದ್ಯೋಗ ಖಾತರಿ ಯೋಜನೆಯ ಕೆಲಸದ ದಿನಗಳನ್ನು 200 ದಿನಕ್ಕೆ ಹೆಚ್ಚಿಸಬೇಕು. ಬರಗಾಲದ ಕೂಲಿಯಾಗಿ 600 ರೂ ಪಾವತಿಸಬೇಕು.
ಸುದ್ದಿಗೋಷ್ಠಿಯಲ್ಲಿ ಶರಣಬಸಪ್ಪ ಮಮಶೆಟ್ಟಿ ಹುರಮುಂಜಿ, ಜಾವೇದ್ ಹುಸೈನ್, ದಿಲೀಪ್ ಕುಮಾರ್, ನಾಗೂರೆ ರಾಯಪ್ಪ ಉಪಸ್ಥಿತರಿದ್ದರು.