- ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಸಮನ್ಸ್
- ಎಚ್.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆ
ಹಾಸನ ಲೋಕಸಭಾ ಕ್ಷೇತ್ರ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಘೋಷಿಸಿದ ಬೆನ್ನಲ್ಲೇ ಎಚ್ ಡಿ ರೇವಣ್ಣ ಸಹಿತ ಎಲ್ಲ ಅಭ್ಯರ್ಥಿಗಳಿಗೆ ಹೈಕೋರ್ಟ್ ಸೋಮವಾರ ಸಮನ್ಸ್ ಜಾರಿ ಮಾಡಿದೆ.
ಹಾಸನದ ಹೊಳೆನರಸೀಪುರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಗೆಲುವು ದಾಖಲಿಸಿದ್ದ ಎಚ್ ಡಿ ರೇವಣ್ಣರ ಸಹಿತ ಸ್ಪರ್ಧೆ ಮಾಡಿದ್ದ ಎಲ್ಲ ಅಭ್ಯರ್ಥಿಗಳಿಗೆ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ಸಮನ್ಸ್ ಜಾರಿ ಮಾಡಿದೆ.
ಪರಾಜಿತ ಬಿಜೆಪಿ ಅಭ್ಯರ್ಥಿ ಹಾಗೂ ವಕೀಲರಾದ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು(ಸೆಪ್ಟೆಂಬರ್ 04) ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ಅವರ ವಿರುದ್ಧ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಸಮನ್ಸ್ ಜಾರಿ ಮಾಡುವಂತೆ ಆದೇಶ ಹೊರಡಿಸಿದೆ. ವಿಧಾನಸಭೆ ಕಾರ್ಯದರ್ಶಿ ಮೂಲಕ ಸಮನ್ಸ್ ಜಾರಿಗೆ ಕೋರ್ಟ್ ಆದೇಶ ಮಾಡಿದೆ.
ರೇವಣ್ಣ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿ ದೇವರಾಜೇಗೌಡ ಪರಾಜಿತಗೊಂಡಿದ್ದರು. ಚುನಾವಣೆಯಲ್ಲಿ ಅಕ್ರಮ ನಡೆಸಿ ಜೆಡಿಎಸ್‌ನ ಎಚ್.ಡಿ. ರೇವಣ್ಣ ಜಯಗಳಿಸಿದ್ದಾರೆ. 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಹೀಗಾಗಿ ಇವರಿಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸುವಂತೆ ದೇವರಾಜೇಗೌಡ ಅವರು ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲ ಅಭ್ಯರ್ಥಿಗಳಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಪ್ರಜ್ವಲ್ ರೇವಣ್ಣ ಅವರನ್ನು ಹೈಕೋರ್ಟ್ ಏಕಸದಸ್ಯ ಪೀಠ ಅಸಿಂಧುಗೊಳಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಎಚ್.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆಗಳಿವೆ.
ಚುನಾವಣಾ ನಾಮಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಹೈಕೋರ್ಟ್ ಕಳೆದ ಶುಕ್ರವಾರ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು.