ಡಿಎಂಕೆಯ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂಬ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ಎಲ್ಲ ರಾಜಕೀಯ ಪಕ್ಷಗಳಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ ಎಂದು ತಿಳಿಸಿದೆ.
ಈ ಬಗ್ಗೆ ನವದೆಹಲಿಯ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ನಮ್ಮ ನಿಲುವು ಸ್ಪಷ್ಟವಾಗಿದೆ. ಸರ್ವ ಧರ್ಮ ಸಮಭಾವವೇ ಕಾಂಗ್ರೆಸ್ ನಿಲುವು. ನಾವು ಎಲ್ಲ ಧರ್ಮಗಳನ್ನು ಗೌರವಿಸುತ್ತೇವೆ. ಪ್ರತಿಯೊಂದು ಪಕ್ಷಕ್ಕೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ. ನಾವು ಪ್ರತಿಯೊಬ್ಬರ ನಂಬಿಕೆಗಳನ್ನು ಗೌರವಿಸುತ್ತೇವೆ” ಎಂದು ಹೇಳಿದ್ದಾರೆ.
ಚೆನ್ನೈನಲ್ಲಿ ನಡೆದ ಲೇಖಕರ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, “ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ, ಅದು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು. ಸನಾತನ ಕಲ್ಪನೆಯು ಜಾತಿ ಮತ್ತು ಲಿಂಗದ ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ ಮತ್ತು ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ” ಎಂದು ಹೇಳಿದ್ದರು.
ಈ ಸುದ್ದಿ ಓದಿದ್ದೀರಾ? ‘ಇಂಡಿಯಾ’ ಗೆಲ್ಲದಿದ್ದರೆ ಮಣಿಪುರ, ಹರಿಯಾಣದಂತೆ ದೇಶ ಬದಲು: ಎಂ ಕೆ ಸ್ಟಾಲಿನ್
“ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ. ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ. ಸನಾತನ ಧರ್ಮದಿಂದ ಬಳಲುತ್ತಿರುವ, ತುಳಿತಕ್ಕೊಳಗಾದವರ ಪರವಾಗಿ ಮಾತನಾಡಿದ್ದೇನೆ” ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದರು.
ಈ ಹೇಳಿಕೆಯ ಬಗ್ಗೆ ವಿರೋಧ ವ್ಯಕ್ತವಾದಾಗ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಸ್ಟಾಲಿನ್, “ತನ್ನ ಹೇಳಿಕೆಗೆ ಬದ್ಧವಾಗಿದ್ದೇನೆ, ಈ ಬಗ್ಗೆ ಕಾನೂನಾತ್ಮಕವಾಗಿ ಯಾವುದೇ ಪ್ರಕರಣಗಳನ್ನು ಎದುರಿಸಲು ಸಿದ್ಧವಿದ್ದೇನೆ ಎಂದು ಹೇಳಿದ್ದರು. ನಾನು ಸನಾತನ ಧರ್ಮವನ್ನು ಮಾತ್ರ ಟೀಕಿಸಿದ್ದೇನೆ ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದೇನೆ ಎಂದು ಪುನರುಚ್ಚರಿಸುತ್ತಿದ್ದೇನೆ. ಇದನ್ನು ನಾನು ನಿರಂತರವಾಗಿ ಹೇಳುತ್ತೇನೆ” ಎಂದಿದ್ದರು
ನಕಲಿ ಸುದ್ದಿಗಳನ್ನು ಹರಡುತ್ತಿದೆ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಆಡಳಿತ ಪಕ್ಷವು ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಯಿಂದ ಹೆದರಿದೆ ಮತ್ತು ಜನರ ಗಮನವನ್ನು ತಿರುಗಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದರು.