ಸೆಪ್ಟೆಂಬರ್ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಅಂಗವಾಗಿ ಸರ್ಕಾರದ ನಿರ್ದೇಶನದಂತೆ ದಾವಣಗೆರೆಯಲ್ಲಿ ಸಂವಿಧಾನ ಪ್ರಸ್ತಾವನೆ ಓದು ಮತ್ಉತ ಪ್ರತಿಜ್ಞಾವಿಧಿ ಸ್ವೀಕರಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಜಿಲ್ಲೆಯ 12 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆಯಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ ವಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಯೋಜಿಸಲು ಹಮ್ಮಿಕೊಂಡಿದ್ದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಸರ್ಕಾರದ ನಿರ್ದೇಶನದಂತೆ ಅಂದು ನಮ್ಮ ಸಂವಿಧಾನದ ಪ್ರಸ್ತಾವನೆ ಓದುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ” ಎಂದರು.
“ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಸ್ಟೇಡಿಯಂನಲ್ಲಿ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ 10 ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಅಲ್ಲದೆ ಎಲ್ಲ ತಾಲೂಕುಗಳಲ್ಲಿ, ಗ್ರಾಮ ಪಂಚಾಯಿತಿ, ಶಾಲೆ-ಕಾಲೇಜುಗಳು, ಆಸ್ಪತ್ರೆ, ಹಾಸ್ಟೆಲ್‌ಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಎಲ್ಲ ಕಚೇರಿಗಳು, ಖಾಸಗಿ ಸಂಘ, ಸಂಸ್ಥೆಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ಎಲ್ಲ ಕಡೆ ಕಾರ್ಯಕ್ರಮ ಏರ್ಪಡಿಸುವ ಮೂಲಕ ಅರ್ಥಪೂರ್ಣವಾಗಿ ಸರ್ಕಾರಿ ಕಾರ್ಯಕ್ರಮ ಆಯೋಜನೆ ಮಾಡಬೇಕು” ಎಂದು ಸೂಚನೆ ನೀಡಿದರು.
“ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಸೆಪ್ಟೆಂಬರ್ 15 ರಂದು ಕಾರ್ಯಕ್ರಮದಲ್ಲಿ ಭಾಗವಹಿಸಲು
https://thepreamble-swdkar.in/register/ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಇಲ್ಲಿ ಹಲವು ಆಯ್ಕೆಗಳು ಇರಲಿದ್ದು, ಸೆಪ್ಟೆಂಬರ್ 12 ರೊಳಗಾಗಿ ನೋಂದಣಿ ಮಾಡಿಕೊಂಡು ಸೆ.15 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಆನ್‌ಲೈನ್‌ನಲ್ಲಿ ನೋಂದಣಿ ಮಾಡುವಾಗ ಸಮಾಜ ಕಲ್ಯಾಣ ಇಲಾಖೆಯಡಿ ನಡೆಸುತ್ತಿರುವ ಹಾಸ್ಟೆಲ್, ಸರ್ಕಾರಿ, ಖಾಸಗಿ ಶಾಲಾ, ಕಾಲೇಜು, ಸಹಕಾರ ಸಂಸ್ಥೆ, ಸಾರ್ವಜನಿಕ ಉದ್ದಿಮೆ, ಸಂಸ್ಥೆಗಳು, ಇತರೆ ಸಂಘ, ಸಂಸ್ಥೆಗಳು, ರಾಜಕೀಯ ಪಕ್ಷಗಳು, ಮಿಲಿಟರಿ, ಪ್ಯಾರಾಮಿಲಿಟರಿ, ಭದ್ರತಾ ಸಮವಸ್ತ್ರವುಳ್ಳ ಪಡೆ, ಆರಕ್ಷಕ, ಆರಕ್ಷಕ ಸೇವೆ ನೀಡುತ್ತಿರುವ ಸಂಸ್ಥೆಗಳು, ಇಲಾಖೆ, ನ್ಯಾಯಾಲಯಗಳು, ಶಾಸಕಾಂಗ ಮತ್ತು ಇತರೆ ವೈಯಕ್ತಿಕ ಗುಂಪುಗಳು ಇಲ್ಲಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಎಸ್‌ಬಿಐನಲ್ಲಿ ಪ್ರತ್ಯೇಕ ನಗದು ಕೌಂಟರ್ ತೆರೆಯುವಂತೆ ಆಗ್ರಹ
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣನಾಯ್ಕ, ಅಪರ ಜಿಲ್ಲಾಧಿಕಾರಿ ಪಿ ಎನ್ ಲೋಕೇಶ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ ನಾಗರಾಜ, ಜಿಲ್ಲಾ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪಿ ರಮೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಾಸಂತಿ ಡಿಡಿಪಿಐ ಕೊಟ್ರೇಶ್ ಉಪ್ಪಾರ್, ಡಿಡಿಪಿಐ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.