ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ಸಂಸತ್ ಸದಸ್ಯತ್ವದ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ಮತ್ತೆ ಹಿನ್ನಡೆಗೊಳಗಾಗಿದ್ದಾರೆ.
ಅನರ್ಹಗೊಳಿಸಿದ ಆದೇಶಕ್ಕೆ ತಡೆ ಕೋರಿ ಜೆಡಿಎಸ್‌ನ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ತೀರ್ಪನ್ನು ಕಾಯ್ದಿರಿಸಿದ್ದರು.
ಇಂದು ತೀರ್ಪು ಪ್ರಕಟಿಸಿದ ಹೈಕೋರ್ಟ್ ನ್ಯಾಯಮೂರ್ತಿ ಕೆ.ನಟರಾಜನ್, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದಾರೆ.
ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವವರೆಗೆ ಅನರ್ಹತೆ ಆದೇಶಕ್ಕೆ ತಡೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಹೈಕೋರ್ಟ್ ಗಣನೆಗೆ ತೆಗೆದುಕೊಂಡಿಲ್ಲ.
ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಬಂದ ದಿನವೇ ಮೇಲ್ಮನವಿ ಸಲ್ಲಿಸಲು ತಡೆ ಕೋರಿ ಅರ್ಜಿ ಸಲ್ಲಿಸಬೇಕಿತ್ತು. ಈ ಹಿನ್ನೆಲೆಯಲ್ಲಿ ತೀರ್ಪು ನೀಡಿರುವ ನ್ಯಾಯಪೀಠದಿಂದಲೇ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
ಇದು ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಜೀವನಕ್ಕೆ ಮತ್ತೆ ಕಂಟಕವಾಗಿದೆ. ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಕೆ ಆರೋಪ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿತ್ತು. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಕೋರಿ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಜಯಗೊಂಡಿರುವ ಅಂದಿನ ಬಿಜೆಪಿಯ ಎ.ಮಂಜು ಹಾಗೂ ವಕೀಲ ದೇವರಾಜೇಗೌಡ ಎಂಬವರು ಅರ್ಜಿ ಸಲ್ಲಿಸಿದ್ದರು. ಆ ಬಳಿಕ ಮಂಜು ಅವರು ಜೆಡಿಎಸ್ ಸೇರಿ ದೂರಿನಿಂದ ಹಿಂದೆ ಸರಿದಿದ್ದರೂ, ವಕೀಲ ದೇವರಾಜೇಗೌಡ ಮುಂದುವರಿಸಿದ್ದರು.
ಆದಾಯ ತೆರಿಗೆ ವಿವರಗಳಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ದಾಖಲೆಗಳಲ್ಲಿ ಸುಳ್ಳು ಅಂಕಿ ಅಂಶಗಳಿಂದ ಕೂಡಿದೆ ಎಂದು ದೂರುದಾರರು ಗಂಭೀರ ಆರೋಪ ಮಾಡಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠವು, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಸೆಪ್ಟೆಂಬರ್ 1ರಂದು ತೀರ್ಪು ನೀಡಿತ್ತು.