ಹಾಸನದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ನುಗ್ಗೆಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಒವರ್ ಬಳಿ ಕ್ಯಾಂಟರ್ ವಾಹನ ಹಾಗೂ ಇನ್ನೋವಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರು ಮೂಲದ ನಂದಕುಮಾರ್ (37) ಮೃತ ದುರ್ದೈವಿ. ಮಂಗಳವಾರ ಮುಂಜಾನೆ ಅಪಘಾತ ನಡೆದಿದ್ದು, ಇನ್ನೋವಾ ಕಾರು ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಹಾಸನದ ಕಡೆಗೆ ಬರುತ್ತಿದ್ದ ಕ್ಯಾಂಟರ್ ನಡುವೆ ಡಿಕ್ಕಿಯಾಗಿದೆ. ಇನ್ನೋವಾದಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಪಘಾತದ ಬಾಕಿ ಪರಿಹಾರ ವಿಳಂಬ; 2 ಕೆಎಸ್‌ಆರ್‌ಟಿಸಿ ಬಸ್ ಜಪ್ತಿ
ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ಇಬ್ಬರಿಗೆ, ಹಾಸನ ಜಿಲ್ಲಾಸ್ಪತ್ರೆಯಲ್ಲಿ ಮೂವರು ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಇನ್ನೋವಾದಲ್ಲಿದ್ದ ಏಳು ಮಂದಿ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ. ಚನ್ನರಾಯಪಟ್ಟಣ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.