ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ದ ಬಸ್‌ಗಳಲ್ಲಿ ಟಿಕೆಟ್ ಪಡೆಯದೆ ಪ್ರಯಾಣ ಬೆಳೆಸಿದ್ದ 3208 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ ಎಂದು ನಿಗಮ ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಿಗಮ, “2023ರ ಆಗಸ್ಟ್‌ನಲ್ಲಿ ನಿಗಮದ ತನಿಖಾ ತಂಡಗಳಿಂದ ತಪಾಸಣಾ ಕಾರ್ಯ ನಡೆಸಲಾಗಿದೆ. ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44,416 ವಾಹನಗಳನ್ನು ತನಿಖೆಗೊಳಪಡಿಸಲಾಗಿದೆ. 3020 ಪ್ರಕರಣಗಳನ್ನು ಪತ್ತೆಹಚ್ಚಿ, 3208 ಟಿಕೆಟ್ ರಹಿತ ಪ್ರಯಾಣಿಕರಿಂದ ₹4,70,801 ದಂಡ ಹಾಕಲಾಗಿದೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ ₹69,336 ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ” ಎಂದು ಹೇಳಿದೆ.
ತಪ್ಪಿತಸ್ಥರ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗಿದೆ. ಹಾಗಾಗಿ, ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ ನಿಗಮವು ಪ್ರಯಾಣಿಕರಲ್ಲಿ ಮನವಿ ಮಾಡಿದೆ.