ಗೃಹಲಕ್ಷ್ಮಿ ಯೋಜನೆಯಲ್ಲಿ ಫಲಾನುಭವಿಗಳ ಅರ್ಜಿ ಸ್ವೀಕಾರವಾಗಿ, ಯಾರಿಗೆ ಈ ತಿಂಗಳ ಹಣ ಬಂದಿಲ್ಲವೋ ಅವರಿಗೆ ಎರಡು ತಿಂಗಳ ಹಣ ಒಟ್ಟಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಖಾಸಗಿ ಸುದ್ದಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಶುಕ್ರವಾರ ಮಾತನಾಡಿದ ಅವರು, “ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹಣ ಬಿಡುಗಡೆ ಮಾಡಿದೆ. ಮೊದಲ ಕಂತಿನಲ್ಲಿ 4,600 ಕೋಟಿ ರೂ. ಬಿಡುಗಡೆ ಮಾಡಿದೆ. 2023-24ನೇ ಸಾಲಿನಲ್ಲಿ 17,500 ಕೋಟಿ ರೂ. ನಿಗದಿಪಡಿಸಲಾಗಿತ್ತು. ಆಗಸ್ಟ್, ಸೆಪ್ಟೆಂಬರ್ ತಿಂಗಳ ಅವಧಿಗೆ 4,600 ಕೋಟಿ ರೂ. ಬಿಡುಗಡೆ ಮಾಡಲಾಗಿದೆ” ಎಂದರು.
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ರಕ್ಷಾ ಬಂಧನದ ದಿನ ಮೈಸೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಅದ್ಧೂರಿ ಚಾಲನೆ ಸಿಕ್ಕಿತ್ತು. ಆ ಬಳಿಕ ಅನೇಕ ಮಹಿಳೆಯರ ಖಾತೆಗೆ 2 ಸಾವಿರ ರೂ. ಜಮೆಯಾಗಿತ್ತು. ಆದರೆ ಕೆಲ ಮನೆ ಒಡತಿಯರು ತಮ್ಮ ಖಾತೆಗೆ ಹಣ ಬಂದಿಲ್ಲ ಎಂದು ದೂರಿದ್ದರು. ಎರಡು ತಿಂಗಳಿನ ಹಣ ಬಿಡುಗಡೆ ಮಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.