ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಇಬ್ಬರು ರೈತರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಬರದ ಪರಿಸ್ಥಿತಿಯಲ್ಲಿ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸದಂತೆ ಸೂಚನೆ ನೀಡುವಂತೆ ಮನವಿ ಕೋರಿದ್ದಾರೆ.
ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲವೆಂದು ರಾಜ್ಯ ಸರ್ಕಾರ ಹೇಳಿದೆ. ಅಲ್ಲದೆ, ದೆಹಲಿಯಲ್ಲಿ ಸಚಿವರು ಹಾಗೂ ಸಂಸದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯದ ಹಲವು ಸಚಿವರು ಸಭೆ ನಡೆಸುತ್ತಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೂಡ ಸುಪ್ರೀಂ ಕೋರ್ಟ್‌ನಲ್ಲಿ ಪ್ರತ್ಯೇಕ ದಾವೆ ಹೂಡಿದ್ದಾರೆ. ಇದೀಗ, ಇಬ್ಬರು ರೈತರು ಅರ್ಜಿ ಸಲ್ಲಿಸುವ ಮೂಲಕ ಕಾವೇರಿ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತರಿಕೇರೆ ಗ್ರಾಮದ ರೈತ ಕೆಂಪರಾಜು ಮತ್ತು ಪಾಂಡವಪುರದ ನಿವೃತ ಯೋಧ, ರೈತ ಆರ್.ಪಿ ರವಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅವರು ಸಲ್ಲಿಸಿರುವ ಅರ್ಜಿಗಳನ್ನು ಶುಕ್ರವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.