- ನಮ್ಮ ನ್ಯಾಯಯುತ ಪಾಲನ್ನು ಪಡೆಯಲು ರಾಜ್ಯಕ್ಕೆ ಸಹಾಯ ಮಾಡಿ
- ನಮ್ಮ ರೈತರ ಭವಿಷ್ಯ ರಕ್ಷಿಸಿ; ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಮನವಿ
ನ್ಯಾಯಕ್ಕಾಗಿ ಕಾವೇರಿಯ ಮನವಿ ರಾಜ್ಯಾದ್ಯಂತ ಪ್ರತಿಧ್ವನಿಸುತ್ತದೆ. ರಾಜ್ಯದ ಜನತೆ ಪ್ರತಿ ಹನಿ ನೀರನ್ನು ಕೂಡ ಲೆಕ್ಕ ಇಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ, ಕರ್ನಾಟಕದ ಮನವಿ ಸರಳವಾಗಿದೆ; ಕೂಡಲೇ ಮಧ್ಯಪ್ರವೇಶಿಸಿ, ಕಾವೇರಿ ನೀರಿನಲ್ಲಿ ನಮ್ಮ ನ್ಯಾಯಯುತ ಪಾಲನ್ನು ಪಡೆಯಲು ರಾಜ್ಯಕ್ಕೆ ಸಹಾಯ ಮಾಡಿ ಹಾಗೂ ನಮ್ಮ ರೈತರ ಭವಿಷ್ಯವನ್ನು ರಕ್ಷಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಸಾಮಾನ್ಯ ವರ್ಷಗಳಲ್ಲಿ ತಮಿಳುನಾಡಿಗೆ ನೀರು ಬಿಡಬೇಕಾದ ಪ್ರಮಾಣದ ಬಗ್ಗೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೆ ಸಂಕಷ್ಟದ ಸಮಯದಲ್ಲಿ ಆ ರಾಜ್ಯಕ್ಕೆ ನೀರು ಬಿಡುವ ಪ್ರಮಾಣ ತಿಳಿಸುವ ಸಂಕಷ್ಟ ಸೂತ್ರ ಇನ್ನೂ ನಿರ್ಧಾರವಾಗಿಲ್ಲ. ಇಂತಹ ಸಂದರ್ಭದಲ್ಲಿ ಒಂದು ಸೌಹಾರ್ದ ಇತ್ಯರ್ಥಕ್ಕೆ ಬರುವುದೇ ಉತ್ತಮ. ಆದ್ದರಿಂದ ಕಾವೇರಿ ವಿವಾದದ ಇತ್ಯರ್ಥಕ್ಕೆ ಪ್ರಧಾನ ಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.
“ಕಾವೇರಿ ವಿಷಯದ ವಾದ ಮಂಡನೆಗೆ ಮೊದಲಿನಿಂದಲೂ ಇರುವ ಕಾನೂನೂ ತಂಡವೇ ಈಗಲೂ ಇದ್ದು, ಎಲ್ಲ ಪಕ್ಷದ ಸರ್ಕಾರದ ಅವಧಿಯಲ್ಲಿ ಇದ್ದ ತಂಡವೇ ಆಗಿದೆ. ಕೇಂದ್ರದ ತಜ್ಞರು ರಾಜ್ಯದಲ್ಲಿ ಕಾವೇರಿ ನೀರಿನ ಲಭ್ಯತೆಯನ್ನು ವಾಸ್ತವವಾಗಿ ಪರಿಶೀಲಿಸುವ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಜನತಾ ದಳದ ವರಿಷ್ಠರಾದ ದೇವೇಗೌಡರು, ಈ ಬಗ್ಗೆ ಭೇಟಿಯಾಗಿದ್ದು, ಕೇಂದ್ರದೊಂದಿಗೆ ಅವರ ಹೊಸ ಸ್ನೇಹದಿಂದ ಪರಿಹಾರ ದೊರೆಯಬಹುದೇ ನೋಡಬೇಕಿದೆ. ರಾಜ್ಯ ಸರ್ಕಾರ ಪರಿಹಾರ ಸೂತ್ರ ಕೋರಿ ಬರೆದಿರುವ ಪತ್ರಕ್ಕೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಬಿಜೆಪಿಯ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ, ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು” ಎಂದಿದ್ದಾರೆ.
“ಕಾವೇರಿ ನೀರು ನಿಯಂತ್ರಣಾ ಮಂಡಳಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಂದೆ ಸಂಕಷ್ಟ ಸೂತ್ರ ರೂಪಿಸಲು ನಾವು ಒತ್ತಡ ಹೇರುತ್ತಿದ್ದೇವೆ. ಏಕೆಂದರೆ ಮಳೆ ಕೈಕೊಟ್ಟ ಸಂದರ್ಭದಲ್ಲಿ ಎರಡೂ ಕಡೆ ಸಂಕಷ್ಟ ಶುರುವಾಗುತ್ತದೆ. ಅಂಥ ಸಂದರ್ಭದಲ್ಲಿ ನಾವು ಸಂಕಷ್ಟ ಹಂಚಿಕೊಳ್ಳಬೇಕು. ಇಂತಹ ಸನ್ನಿವೇಶದಲ್ಲಿ ನೀರು ಹಂಚಿಕೆಯ ವಿಚಾರದಲ್ಲಿ ಸಂಕಷ್ಟ ಸೂತ್ರವಿರಬೇಕು. ಮತ್ತೊಂದು ಪರಿಹಾರವೆಂದರೆ, ಮೇಕೆದಾಟು ಯೋಜನೆ ಅನುಷ್ಠಾನ. ಈ ಜಲಾಶಯವಿದ್ದಿದ್ದರೆ 67 ಟಿಎಂಸಿ ನೀರು ಇರುತ್ತಿದ್ದು, ಅಲ್ಲಿ ನೀರಿದ್ದರೆ ತಮಿಳುನಾಡಿಗೆ ನೀರು ಬಿಡಲು ಅನುಕೂಲವಾಗುತ್ತಿತ್ತು. ಈ ಜಲಾಶಯದಿಂದ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೆ ಅನುಕೂಲವಾಗುತ್ತಿತ್ತು” ಎಂದು ವಿವರಿಸಿದ್ದಾರೆ.