ಕರ್ನಾಟಕ ಬಂದ್‌ಗೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಭಾಗಶಃ ಬೆಂಬಲ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ, ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರದಾಡಿದ್ದಾರೆ.
ಶುಕ್ರವಾರ ಬೆಳಗ್ಗೆ ಬಸ್‌ಗಳು ರಸ್ತೆಗಳಿದಿದ್ದವು. ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಬಂದಿದ್ದರು. ಆದರೆ, ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.
ಹೀಗಾಗಿ, ಬಸ್ ಸಂಚಾರ ಸ್ಥಗಿತವಾಗಿದೆ. ಪ್ರತಿಭಟನೆಯಿಂದಾಗಿ ಕಾಲೇಜು ಆಡಳಿತ ಮಂಡಳಿಗಳು ರಜೆ ಘೋಷಿಸಿವೆ. ಪರಿಣಾಮ, ನಗರಕ್ಕೆ ಬಂದಿದ್ದ ವಿದ್ಯಾರ್ಥಿಗಳು ವಾಪಸ್ ತಮ್ಮೂರಿಗೆ ಹೋಗಲು ಬಸ್‌ಗಳಿಲ್ಲದೆ ಪರದಾಡಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಸೇನೆ, ರೈತ ಸಂಘದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಚಿಕ್ಕಮಗಳೂರು ಮಾಜಿ ಸಚಿವ ಸಿ.ಟಿ ರವಿ ಪ್ರತಿನಿಧಿಸಿದ್ದ ಕ್ಷೇತ್ರವಾಗಿದೆ. ಕಳೆದ ಚುನಾವಣೆಯಲ್ಲಿ ಅವರು ಹೀನಾಯ ಸೋಲು ಕಂಡಿದ್ದಾರೆ. ಕ್ಷೇತ್ರದಲ್ಲಿ ಈಗ, ಕಾವೇರಿ ಹೋರಾಟದಲ್ಲಿ ಬಿಜೆಪಿ ಕಾರ್ಯಕರ್ತರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.