ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕರೆ ಕೊಡಲಾಗಿರುವ ಕರ್ನಾಟಕ ಬಂದ್‌ಗೆ ಕಾವೇರಿ ನದಿ ಭಾಗದ ಜಿಲ್ಲೆಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳು ಸಂಪೂರ್ಣ ಬಂದ್ ಆಗಿದ್ದು, ಎರಡೂ ನಗರಗಳು ಸ್ತಬ್ದಗೊಂಡಿವೆ.
ಚಾಮರಾಜನಗರದಲ್ಲಿ ಬೆಳಿಗ್ಗೆ 6 ಗಂಟೆಯಿಂದಲೇ ಕಾವೇರಿ ಹೋರಾಟ ಕ್ರಿಯಾ ಸಮಿತಿಯವರು ಪ್ರತಿಭಟನೆ ಆರಂಭಿಸಿದ್ದಾರೆ. ರಸ್ತೆಗಳಲ್ಲಿ ಸಂಚರಿಸಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರ, ಖಾಸಗಿ ಬಸ್, ಆಟೋಗಳು ರಸ್ತೆಗಿಳಿದಿಲ್ಲ. ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.
ರಾಮನಗರದಲ್ಲಿಯೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ನಗರದಲ್ಲಿ ಅಂಗಡಿಗಳಲ್ಲೆವೂ ಬಂದ್ ಆಗಿದ್ದು, ಅಲ್ಲಲ್ಲಿ ತೆರೆದಿದ್ದ ಅಂಗಡಿಗಳನ್ನೂ ಪ್ರತಿಭಟನಾಕಾರರ ಮುಚ್ಚಿಸಿದ್ದಾರೆ. ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ.
ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವನ್ನು ಎಮ್ಮೆಗೆ ಕಟ್ಟಿ ಮೆರವಣಿಗೆ ಮಾಡಿದ್ದಾರೆ. ಭಾವಚಿತ್ರಗಳನ್ನು ಕಸಿದುಕೊಂಡ ಪೊಲೀಸರು, ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಎಚ್ಚರಿಕೆ ನೀಡಿದ್ದಾರೆ.