ಕರ್ನಾಟಕ ಬಂದ್‌ಗೆ ಬೆಂಗಳೂರಿನಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರು ಭಾಗಶಃ ಸ್ತಬ್ದವಾಗಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಬುರ್ಖಾ ಧರಿಸಿ, ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದ ಬಳಿ ಬುರ್ಖಾ ಧರಿಸಿ ಮೆರವಣಿಗೆ ನಡೆಸಿದ್ದಾರೆ.
ಟೌನ್‌ಹಾಲ್ ಬಳಿ ಮೆರವಣಿಗೆ ನಡೆಸಲು ಮುಂದಾದ ಕನ್ನಡ ಪರ ಹೋರಾಟಗಾರರನ್ನು ಮೆರವಣಿಗೆಗೆ ಅವಕಾಶವಿಲ್ಲವೆಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಾಟಾಳ್ ನಾಗರಾಜ್, “ಸರ್ಕಾರವು ಪೊಲೀಸರನ್ನು ನಿಯೋಜಿಸಿ ಕರ್ನಾಟಕ ಬಂದ್ ಅನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಪೊಲೀಸರು ನಮ್ಮ ಕಾರ್ಯಕರ್ತರನ್ನು ಬಂಧಿಸುತ್ತಿದ್ದಾರೆ. ಮೆರವಣಿಗೆ ಮಾಡಿದರೆ ತಪ್ಪೇನು? ಪೊಲೀಸ್ ಗೂಂಡಾಗಿರಿ, ದೌರ್ಜನ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ” ಎಂದು ಹೇಳಿದ್ದಾರೆ.
“ನ್ಯಾಯದೇವತೆ ಧರಿಸುವ ಬಟ್ಟೆ ಎಂದಾದರೂ ಕರೆಯಲಿ ಅಥವಾ ಬುರ್ಖಾ ಎಂದಾದರೂ ಕರೆಯಲಿ. ನ್ಯಾಯದೇವತೆಯ ಸಂದೇಶ ಸಾರುವ ಬುರ್ಖಾ ಧರಿಸಿದ್ದೇನೆ. ಮಹಿಳೆಯರ ಗೌರವದ ಸಂಕೇತ ಸಾರುವ ಬುರ್ಖಾ ಧರಿಸಿದ್ದೇನೆ. ಕಾವೇರಿ ನದಿ ನೀರು ವಿಚಾರವಾಗಿ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇನೆ” ಎಂದು ಹೇಳಿದ್ದಾರೆ.
ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣಗಳಲ್ಲಿ ಬಸ್ ನಿಂತಿವೆಯಾದರೂ, ಸಂಚಾರ ನಡೆಸುತ್ತಿಲ್ಲ. ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆಯಲ್ಲಿ ಕನ್ನಡ ಚಿತ್ರರಂಗದ ಹಲವಾರು ಕಲಾವಿದರು ಭಾಗವಹಿಸಿದ್ದಾರೆ.