ಚಾಮರಾಜನಗರದ ಪೂಣಜನೂರು ಚೆಕ್ ಪೋಸ್ಟ್‌ನಲ್ಲಿ ಸೆ.30, ಶನಿವಾರದಂದು, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ಖಂಡಿಸಿ ಜೆಡಿಎಸ್ ಮುಖಂಡರು, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹೆದ್ದಾರಿ ತಡೆದು ಪ್ರತಿಭಟಿಸಿದರು.
ಪ್ರತಿಭಟನಾನಿರತರು, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ತಮಿಳುನಾಡು ಬಸ್ ತಡೆಗೆ ಮತ್ತು ಟೈಯರ್‌ಗೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಇದನ್ನು ತಡೆದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಿದ್ದಾರೆ.
ಚೆಕ್‌ಪೋಸ್ಟ್‌ನಲ್ಲಿ ಸೇರಿದ್ದ ಪ್ರತಿಭಟನಾಕಾರರು, ಹೆದ್ದಾರಿಗೆ ಅಡ್ಡಲಾಗಿ ಕುಳಿತು ವಾಹನ ಸಂಚಾರ ತಡೆದರು. ಈ ವೇಳೆ ತಮ್ಮ ಆಕ್ರೋಶ ಹೊರಹಾಕಿದ ಪ್ರತಿಭಟನಾನಿರತರು, ತಮಿಳುನಾಡು ಸರ್ಕಾರ, ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಕಾವೇರಿ ನಿರ್ವಹಣ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿದರು.
ಸ್ಥಳದಲ್ಲಿ ಮಾತನಾಡಿದ ಅಲೂರುಮಲ್ಲು,”ರಾಜ್ಯದಲ್ಲಿ ಮಳೆಯ ಭಾವದಿಂದ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆ ಇದೆ. ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ. ಇಂತಹ ಪರಿಸ್ಥಿತಿಯಲ್ಲೂ ತಮಿಳುನಾಡು ಸರ್ಕಾರ ಮೂರನೇ ಬೆಳೆಗೆ ನೀರು ಕೇಳುತ್ತಿದೆ.
ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ಕೂಡಲೇ ನಿಲ್ಲಿಸಬೇಕು. ಇಲ್ಲವಾದರೆ, ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ನಗರಕ್ಕೆ ಬಂದಾಗ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು. ಕಾವೇರಿ ಕೊಳ್ಳದ ಜಲಾಶಯಗಳಿಗೆ ಮುಕ್ತಿಗೆ ಹಾಕಲಾಗುವುದು.
ರಾಜ್ಯ ಸರ್ಕಾರ ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿದು, ನೀರು ಬಿಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕಾವೇರಿ ಕೊಳ್ಳದ ಜಲಾಶಯಗಳಲ್ಲಿರುವ ನೀರಿನ ವಸ್ತುಸ್ಥಿತಿಯನ್ನು ಸುಪ್ರೀಂಕೋರ್ಟ್ ಮತ್ತು ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡಲು ವಿಫಲರಾಗಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರೊಂದಿಗೆ ಒಳ ಒಪ್ಪಂದ ಮಾಡಿಕೊಂಡು, ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ, ತಮಿಳುನಾಡಿಗೆ ನೀರು ಬಿಟ್ಟು ರಾಜ್ಯ ಜನತೆಗೆ ಅನ್ಯಾಯ ಮಾಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ರಾಜ್ಯ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಜೆಡಿಎಸ್ ಮುಖಂಡ ಆಲೂರು ಮಲ್ಲು, ಜೆ.ಎಂ. ಶಂಕರ್, ಹೊಂಗನೂರು ರಾಜು, ಬಸವನಪುರ ಮಂಜು, ಕರ್ನಾಟಕ ರಕ್ಷಣಾ ಪಡೆ ಜಿಲ್ಲಾಧ್ಯಕ್ಷ ಆರ್. ನಾರಾಯಣ್, ಜನಸೇನ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂ.ಎನ್. ಹರೀಶ್ ಕುಮಾರ್, ಕದಂಬ ಸೇನೆಯ ಅಂಬರೀಶ್, ಹೊನ್ನಹಳ್ಳಿ ಬಸವಣ್ಣ, ಸುರೇಶ್ ಬಾಬು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.