ಕರ್ನಾಟಕದಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಿದೆ. ಮುಂಗಾರು ಅವಧಿಯೂ ಬಹುತೇಕ ಕೊನೆಗೊಂಡಿದೆ. ಹಿಂಗಾರು ಆರಂಭವಾಗುತ್ತಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಹಜ ಹವಾಮಾನ ಇರಲಿದ್ದು, ಕೆಲವೆಡೆ ಹಗುರ, ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಉಳಿದೆಡೆ ಒಣಹವೆ ಇರಲಿದ್ದು, ಕೆಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗುವ ಸಾಧ್ಯತೆಯೂ ಇದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
“ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಅಂದರೆ ಭಾನುವಾರ ಬೆಳಗ್ಗೆ 8.30ರ ತನಕ ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ” ಎಂದು ತಿಳಿಸಿದೆ.
“ರಾಜ್ಯದಲ್ಲಿ ಶುಕ್ರವಾರ ಕಲಬುರಗಿ ಮತ್ತು ಚಿಕ್ಕನಹಳ್ಳಿಯಲ್ಲಿ ಅತಿ ಗರಿಷ್ಠ ಉಷ್ಣಾಂಶ 34.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಸಮತಟ್ಟು ಪ್ರದೇಶಗಳ ಪೈಕಿ ಬಾಗಲಕೋಟೆಯಲ್ಲಿ ಕನಿಷ್ಠ ಉಷ್ಣಾಂಶ 15.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ” ಎಂದು ವರದಿ ನೀಡಿದೆ.
“ಉಳಿದಂತೆ ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ರಾಯಚೂರು, ದಕ್ಷಿಣ ಒಳನಾಡಿನ ಮಂಡ್ಯ, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯಕ್ಕಿಂತ 1ರಿಂದ 2 ಡಿಗ್ರಿ ಹೆಚ್ಚಾಗುವ ನಿರೀಕ್ಷೆ ಇದೆ” ಎಂದು ತಿಳಿಸಿದೆ.
“ಕೊಪ್ಪಳ, ಕೋಲಾರ, ಮೈಸೂರು, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ಉಷ್ಣಾಂಶ ಅಂದರೆ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿಗಳಷ್ಟು ಕಡಿಮೆ ಉಷ್ಣತೆ ಕಾಣುವ ಸಾಧ್ಯತೆ ಇದೆ” ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಸಮಿತಿ ರಚನೆ
“ಅಕ್ಟೋಬರ್ 8ರ ಭಾನುವಾರ ಬೆಳಗ್ಗೆ ತನಕ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಶನಿವಾರ ಸಂಜೆ ಅಥವಾ ರಾತ್ರಿ ವೇಳೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಬಹುದು” ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.