ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಹಲವು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರುವುದು ಖಚಿತವಾಗುತ್ತಿದೆ. ಸದ್ಯ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಪಕ್ಷ ಸೇರ್ಪಡೆಯ ವಿಚಾರವಾಗಿ ಪೂರ್ಣಿಮಾ ಶ್ರೀನಿವಾಸ್ ಅವರು ಭಾನುವಾರ ಸಂಜೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಚರ್ಚೆ ನಡೆಸಿದರು. ಅವರು ಅಕ್ಟೋಬರ್ 20ಕ್ಕೆ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ನಾಯಕರು ತಿಳಿಸಿದ್ದಾರೆ.
2018ರಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪೂರ್ಣಿಮಾ ಶ್ರೀನಿವಾಸ್, ಕಾಂಗ್ರೆಸ್‌ನ ಡಿ ಸುಧಾಕರ್ ವಿರುದ್ಧ ಜಯಗಳಿಸುವ ಮೂಲಕ ಚಿತ್ರದುರ್ಗ ಜಿಲ್ಲೆಯ ಮೊದಲ ಮಹಿಳಾ ಶಾಸಕಿ ಎಂಬ ಕೀರ್ತಿಗೆ ಪಾತ್ರರಾಗಿದ್ದರು.
2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿಯಿಂದ ಸ್ಪರ್ಧಿಸಿದ್ದ ಪೂರ್ಣಿಮಾ, ಕಾಂಗ್ರೆಸ್‌ನ ಸುಧಾಕರ್ ಅವರ ವಿರುದ್ಧ 30322 ಮತಗಳ ಅಂತರದಿಂದ ಸೋಲನುಭವಿಸಿದ್ದರು. ಗೆಲುವು ಕಂಡಿದ್ದ ಡಿ ಸುಧಾಕರ್, ಸದ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವರಾಗಿದ್ದಾರೆ.
ಇತ್ತೀಚೆಗೆ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ವೇಳೆ ಬೆಂಗಳೂರಿನ ಕೆ.ಆರ್. ಪುರಂನ ದೇವಸಂದ್ರದಲ್ಲಿರುವ ಪೂರ್ಣಿಮಾ ಶ್ರೀನಿವಾಸ್ ಅವರ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ, ಮಾತುಕತೆ ನಡೆಸಿದ್ದರು. ಈ ವೇಳೆ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ವದಂತಿ ಹಬ್ಬಿತ್ತು. ಆದರೆ ಅದು ದೃಢವಾಗಿರಲಿಲ್ಲ.
ಇಂದು ಸಿಎಂ ಹಾಗೂ ಡಿಸಿಎಂ ಭೇಟಿಯ ಬಳಿಕ ಅಕ್ಟೋಬರ್ 20ಕ್ಕೆ ಅವರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಪೂರ್ಣಿಮಾ ಅವರ ತಂದೆ ದಿವಂಗತ ಕೃಷ್ಣಪ್ಪ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು.
ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.