ಬಿಜೆಪಿ ಸದಸ್ಯ ಯೋಗೀಶ್ ಗೌಡರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್‌ಅನ್ನು ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಆರೋಪಿ, ಶಾಸಕ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶಿಸುವ ಸಾಧ್ಯತೆ ಮತ್ತಷ್ಟು ಕ್ಷೀಣಿಸಿದೆ.
ಯೋಗೀಶ್‌ಗೌಡರ್ ಕೊಲೆ ಪ್ರಕರಣದ ತನಿಖೆಯನ್ನು ವಿನಯ್ ಕುಲಕರ್ಣಿ ಹಾದಿ ತಪ್ಪಿಸುತ್ತಿದ್ದಾರೆ. ಸಾಕ್ಷಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಹತ್ಯೆಯ ತನಿಖೆಯಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳು ನಮಗೆ ಬೆದರಿಕೆಯೊಡ್ಡಿದ್ದಾರೆ. ಸರಿಯಾದ ರೀತಿಯಲ್ಲಿ ಪೊಲೀಸರು ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ಮೃತ ಯೋಗೀಶ್‌ಗೌಡರ್ ಸಹೋದರ ಗುರುನಾಥಗೌಡ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅವರ ಮನವಿಗೆ ಸ್ಪಂದಿಸಿದ್ದ ಹೈಕೋರ್ಟ್, ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಿಸದಂತೆ ನಿರ್ಬಂಧ ಹೇರಿದೆ.
ಇತ್ತೀಚೆಗೆ, ಹುಬ್ಬಳ್ಳಿ-ಧಾರವಾಡ ಪೊಲೀಸರು ಪ್ರಕರಣದ ಬಿ-ರಿಪೋರ್ಟ್ ಸಲ್ಲಿಸಿದ್ದರು. ಆದರೆ, ಪೊಲೀಸ್ ವರದಿಯಲ್ಲಿ ಹಲವಾರು ನ್ಯೂನತೆಗಳನ್ನು ಕಂಡುಬಂದಿವೆ ಎಂದಿರುವ ಜನಪ್ರತಿನಿಧಿಗಳ ನ್ಯಾಯಾಲಯವು, ವರದಿಯನ್ನು ತಿರಸ್ಕರಿಸಿದೆ. ಅಲ್ಲದೆ, ಸಂಪೂರ್ಣ ತನಿಖೆಯ ನಂತರ ಅಂತಿಮ ಅಥವಾ ಹೆಚ್ಚುವರಿ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ವಿನಯ್ ಕುಲಕರ್ಣಿ ಸ್ಪರ್ಧಿಸಿದ್ದರು. ಆ ವೇಳೆ, ಪ್ರಚಾರಕ್ಕಾಗಿ ಧಾರವಾಡಕ್ಕೆ ಪ್ರವೇಶಿಸಲು ಅನುಮತಿ ನೀಡುವಂತೆ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಅನುಮತಿ ನೀಡಲು ನ್ಯಾಯಾಲಯ ನಿರಾಕರಿಸಿತ್ತು. ಬಳಿಕ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸಲು ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನೂ ಕೋರ್ಟ್ ವಜಾಗೊಳಿಸಿತ್ತು.