ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಮೊದಲ ಸೆಮಿಸ್ಟರ್ ಪ್ರಾರಂಭವಾಗಿ ಒಂದು ತಿಂಗಳು ಕಳೆದರೂ ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯುತ್ತಿಲ್ಲ. ಆದ್ದರಿಂದ, ಸರ್ಕಾರವು ಮೊದಲ ವರ್ಷದ ತರಗತಿಗಳನ್ನು ಆದಷ್ಟು ಬೇಗ ಪ್ರಾರಂಭಿಸಬೇಕು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (ಎಐಡಿಎಸ್ಒ) ಒತ್ತಾಯಿಸಿದೆ.
ಎಐಡಿಎಸ್ಒ ಜಿಲ್ಲಾಧ್ಯಕ್ಷ ಸುಭಾಷ್ ಮಾತನಾಡಿ, “ತರಗತಿಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಪ್ರಾರಂಭವಾಗಿಲ್ಲ. ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ ಇದ್ದು, ದಿನಕ್ಕೆ ಒಂದು ಅಥವಾ ಎರಡು ತರಗತಿಗಳು ಮಾತ್ರ ನಡೆಯುತ್ತಿವೆ. ಪ್ರತಿದಿನ ತರಗತಿಗಳು ನಡೆಯದ ಕಾರಣ ವಿದ್ಯಾರ್ಥಿಗಳು ಕಾಲೇಜಿಗೆ ಬಂದು ನಿರಾಶೆಯಿಂದ ಹಿಂದಿರುಗುತ್ತಿದ್ದಾರೆ. ಇದರಿಂದ ಶೈಕ್ಷಣಿಕ ಕಲಿಕೆಗೆ ಅಡ್ಡಿಯಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ಸೆಮಿಸ್ಟರ್ ಅಂತ್ಯದ ವೇಳೆಗೆ ಪೂರ್ಣ ಪ್ರಮಾಣದ ಪಾಠಗಳು ನಡೆಯದಿದ್ದರೂ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆಯಬೇಕಾಗುತ್ತದೆ. ಇದು ವಿದ್ಯಾರ್ಥಿಗಳ ಕಲಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ” ಎಂದು ಎಐಡಿಎಸ್‌ಒ ಸದಸ್ಯರು ಮಾಹಿತಿ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ವಾಲ್ಮೀಕಿ ಜಯಂತಿ, ಗ್ರಾಮೀಣ ದಸರಾ ನೆಡೆಸಲು ಪೂರ್ವಭಾವಿ ಸಭೆ
“ಉನ್ನತ ಶಿಕ್ಷಣ ಪಡೆಯಲು ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ. ಅಂತಹ ಪರಿಸ್ಥಿತಿಯಲ್ಲಿ, ಉಪನ್ಯಾಸಕರ ಕೊರತೆಯಿಂದಾಗಿ ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿಯುವ ಸಾಧ್ಯತೆ ಎದರುರಾಗಿದೆ. ಮೈಸೂರು ವಿಶ್ವವಿದ್ಯಾಲಯವು ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ತರಗತಿಗಳನ್ನು ನಡೆಸಬೇಕು” ಎಂದು ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ಆಗ್ರಹಿಸಿದ್ದಾರೆ.